ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ದ್ವಿಚಕ್ರ ಮತ್ತು ಕಾರುಗಳ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರಿ ಪೊಲೀಸರು 556 ಪ್ರಕರಣಗಳನ್ನು
ದಾಖಲಿಸಿದ್ದಾರೆ.
50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 9 ರಿಂದ 15ರವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 52,834 ವಾಹನಗಳನ್ನು ಪರಿಶೀಲನೆ ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರರು ಹಾಗೂ ಚಾಲಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅತಿವೇಗದಿಂದ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ 133 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಮತ್ತು 1.33 ಲಕ್ಷ ದಂಡ ಸಂಗ್ರಹಿಸಲಾಗಿದೆ.
ಕಳೆದ ಹಲವು ತಿಂಗಳಿನಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು, ಅತಿವೇಗದಿಂದ ವಾಹನ
ಚಲಾಯಿಸುವರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಸ್ತೆ ಸುರಕ್ಷತೆಗಾಗಿ ಈ ರೀತಿಯ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಯಲಿದೆ ಎಂದು ಪೋಲೀಸರು ಎಚ್ಚರಿಕೆ ನೀಡಲಾಗಿದೆ.