ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಡ್ರಗ್ಸ್‌ ಸೇವನೆ ಆರೋಪ; ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

Most read

ಬೆಂಗಳೂರು: ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಸಮೀಪದ ಸಿಂಗೇನ ಅಗ್ರಹಾರದಲ್ಲಿರುವ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತೆಲುಗು ಭಾಷಾ ನಟಿ ಕೊಲ್ಲ ಹೇಮಾ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದ ಹೇಮಾ ಪರ ವಕೀಲರು, ಈ ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆ ಆಧರಿಸಿ ಹೇಮಾ ವಿರುದ್ಧ, ಮಾದಕ ದ್ರವ್ಯ ನಿಗ್ರಹ ಕಾಯ್ದೆ–1985ರ (ಎನ್‌ಡಿಪಿಎಸ್‌) ಕಲಂ 27 (ಬಿ) ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಆದರೆ, ಅವರು ಮಾದಕ ವಸ್ತು ಸೇವಿಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆದ್ದರಿಂದ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿಕೊಂಡರು.

 ಈ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶ ನೀಡಿತು. ಹಾಗೆಯೇ ಮುಂದಿನ ಆದೇಶದವರೆಗೆ ವಿಚಾರಣೆಯನ್ನು ನಡೆಸದಂತೆ ಮಧ್ಯಂತರ ತಡೆ ನೀಡಿ ಆದೇಶ ನೀಡಿತು.

ಪ್ರಕರಣದ ಹಿನ್ನೆಲೆ: ಜಿ.ಎಂ.ಫಾರ್ಮ್ ಹೌಸ್‌ ನಲ್ಲಿ 2024ರ ಮೇ 19 ರಂದು ಬರ್ತ್‌ಡೇ ಪಾರ್ಟಿ ಹೆಸರಿನಲ್ಲಿ ಮದ್ಯ ಹಾಗೂ ಮಾದಕ ದ್ರವ್ಯ ಸೇವಿಸುವ ರೇವ್‌ ಪಾರ್ಟಿ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಬ್ಬಗೋಡಿ ಪೊಲೀಸರಿಗೆ ದಾಳಿ ನಡೆಸಿದ್ದ ಪೊಲೀಸರು, ಈ ಸ್ಥಳದಲ್ಲಿ ಬರ್ತ್‌ಡೇ ಪಾರ್ಟಿ ಹೆಸರಿನಲ್ಲಿ ಮದ್ಯ ಹಾಗೂ ಮಾದಕ ದ್ರವ್ಯ ಸೇವಿಸುವ ರೇವ್‌ ಪಾರ್ಟಿ ನಡೆಯುತ್ತಿರುವುದು
ಕಂಡುಬಂದಿದೆ. ಈ ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಅವರೂ ಭಾಗಿಯಾಗಿದ್ದರು ಎಂದು ಆರೋಪಿಸಿ ಅವರನ್ನು ವಶಕ್ಕೆ ಪಡೆದಿದ್ದರು. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಮಧ್ಯೆ ಹೇಮಾ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ಬೆಂಗಳೂರು ಗ್ರಾಮಾಂತರ, 8ನೇ ಹೆಚ್ಚುವರಿ ಸೆಷನ್ಸ್‌ನ ವಿಶೇಷ ನ್ಯಾಯಾಲಯಕ್ಕೆ 1,086 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಸೇರಿದಂತೆ ಹಲವು ಉದ್ಯಮಿಗಳು ಭಾಗವಹಿಸಿದ್ದರು.
ಇವರಲ್ಲಿ ಹಲವರು ಡ್ರಗ್ಸ್ ಸೇವನೆ ಮಾಡಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.


More articles

Latest article