ಬೆಂಗಳೂರು: ಉದ್ಯಮಿಗಳು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು (ಡ್ರಗ್ಸ್) ಪೂರೈಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಖ್ಯಾತ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಮೂಲಗಳು ತಿಳಿಸಿವೆ. ಮೇಲ್ಮನವಿ ಸಲ್ಲಿಸಲು ಗೃಹ ಹಾಗೂ ಕಾನೂನು ಇಲಾಖೆಯು ಸಮ್ಮತಿ ನೀಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಪ್ರಶಾಂತ್ ರಂಕ ವಿರುದ್ಧ ಸಿಸಿಬಿ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಎರಡು ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಹೇಳಿಕೆಗಳು ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಹೊರತುಪಡಿಸಿದರೆ, ಅರ್ಜಿದಾರರು ಪಾರ್ಟಿ ಆಯೋಜಿಸಿದ್ದರು ಅಥವಾ ಡ್ರಗ್ಸ್ ಪೂರೈಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದುಅಭಿಪ್ರಾಯಪಟ್ಟಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು.
2020 ರಲ್ಲಿ ಈ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ನಟಿಯರು ಡ್ರಗ್ಸ್ ಪೂರೈಕೆ ಮಾಡಿರುವುದರ ಜತೆಗೆ ಡ್ರಗ್ಸ್ ಸೇವನೆಯನ್ನೂ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇವರಷ್ಟೇ ಅಲ್ಲದೆ, ದಿಗಂತ್, ಲೂಸ್ ಮಾದ ಯೋಗಿ ಸೇರಿದಂತೆ ಅನೇಕ ನಟ ನಟಿಯರನ್ನು ಕರೆದು ವಿಚಾರಣೆ ಮಾಡಲಾಗಿತ್ತು.