ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

Most read

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಕರ್ತರು, ಬೆಂಗಳೂರಿನ ಶಾಂತಿನಗರದ ಇ.ಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಾವಚಿತ್ರಗಳ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಇ.ಡಿ ವಿರುದ್ಧ ಘೋಷಣೆಗಳನ್ನು ಕೂಗಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಹಾಗೂ ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಶಾಂತಿನಗರದ ಟಿಟಿಎಂಸಿ ಬಳಿ ಸೇರಿದ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ತಡೆದರು. ಪ್ರತಿಭಟನೆಯನ್ನು ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿಕೊಂಡರೂ ಕಾಂಗ್ರೆಸ್‌ ಕಾರ್ಯಕರ್ತರು ಜಗ್ಗಲಿಲ್ಲ. ಬದಲಾಗಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ ಗಳನ್ನು ತಳ್ಳಿ ಇ.ಡಿ ಕಚೇರಿಯತ್ತ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಸಿ ಚಂದ್ರಶೇಖರ್‌,  ಪ್ರತಿಪಕ್ಷಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತುಳಿಯಲು ಸುಳ್ಳು ಆರೋಪಗಳನ್ನು ಇ.ಡಿ ಹೊರಿಸಿದೆ. ಮೋದಿ ಸರ್ಕಾರದ ಈ ಕ್ರಮದ ವಿರುದ್ಧ ತೀವ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

More articles

Latest article