ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಡಿಸಿಸಿ ಬ್ಯಾಂಕ್ ಗೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ತಪಾಸಣೆ ಮಾಡುತ್ತಿದ್ದಾರೆ. ಕೋಲಾರ ತಾಲ್ಲೂಕಿನ ಬ್ಯಾಲಹಳ್ಳಿಯಲ್ಲಿರುವ ಮಾಜಿ ಅಧ್ಯಕ್ಷ ಗೋವಿಂದೇಗೌಡ ಮನೆಯ ಮೇಲೂ ದಾಳಿ ನಡೆದಿದೆ. ಬ್ಯಾಂಕ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಕುತೂಹಲಕಾರಿ ಸಂಗತಿ ಎಂದರೆ ನಾಳೆ ಇದೇ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ನಡೆಯುತ್ತಿದೆ. ಮಾಜಿ ಅದ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಅವರು ಚುನಾವಣೆಗೆ ಸ್ಪರ್ದೆ ಮಾಡಿದ್ದಾರೆ.
ಬಡ್ಡಿ ಮನ್ನಾ ದುರುಪಯೋಗ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಹಿಳಾ ಸಂಘಗಳಿಗೆ ಸಾಲ ನೀಡಿರುವುದೂ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿವೆ. ಈ ಕ್ಷೇತ್ರದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹಾಗೂ ಶಾಸಕ ಕೆ.ವೈ.ನಂಜೇಗೌಡ ಬೆಂಬಲಿಗ ಮಾಲೂರಿನ ಬಿ.ಆರ್.ಶ್ರೀನಿವಾಸ್ ನಡುವೆ ಬಾರಿ ಪೈಪೋಟಿ ಏರ್ಪಟ್ಟಿದೆ.