ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ: ಸೌಮ್ಯ ರೆಡ್ಡಿ

Most read

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.

ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ, ಗಂಡನ ಶಸ್ತ್ರ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಕೆಲವು ಮಹಿಳೆಯರು ತಮ್ಮ ಮನೆಗೆ ಫ್ರಿಡ್ಜ್, ಟಿವಿ ಹಾಗೂ ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ ಎಂದರು.

ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ ಮಾತನಾಡಿ ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು.

ಗ್ರಾಮೀಣ ಮಹಿಳೆಯರು ತಮ್ಮ ಋತುಚಕ್ರದ ವೇಳೆ ಅಗತ್ಯವಿರುವ 10 ಸ್ಯಾನಿಟರಿ ಪ್ಯಾಡ್ ಖರೀದಿಸುವುದು ಕಷ್ಟವಾಗುತ್ತಿದೆ. ಹೀಗಾಗಿ ಮಹಿಳಾ ಕಾಂಗ್ರೆಸ್ ಸದಸ್ಯರಿಗೆ ಸ್ಯಾನಿಟರ್ ಪ್ಯಾಡ್ ತಯಾರಿ ಮಾಡುವ ಯಂತ್ರವನ್ನು ನೀಡಿ ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಕಾರ್ಯಕ್ರಮ ರೂಪಿಸಿದ್ದೇವೆ. ಇದರಿಂದ ಉತ್ಪಾದನೆಯಾಗುವ ಪ್ಯಾಡ್ ಗಳನ್ನು ಉಚಿತವಾಗಿ ಪ್ರತಿ ಹಳ್ಳಿಯಲ್ಲಿ ಮಹಿಳೆಯರಿಗೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯ ಮಹಿಳೆಯನ್ನು ಲೋಕಸಭೆ ಸದಸ್ಯೆಯನ್ನಾಗಿ ಮಾಡುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ. ಇದನ್ನು ಜಾರಿಗೊಳಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

More articles

Latest article