ಇಂದು ಸಂಜೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ  

Most read

ಬೀದರ್: ಕಳೆದ ರಾತ್ರಿ ನಿಧನ ಹೊಂದಿದ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ. ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿಯ ಸಮಾಧಿ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ  10.50ರ ಸುಮಾರಿನಲ್ಲಿ ನಿಧನಹೊಂದಿದರು. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು.

ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ  2019ರಲ್ಲಿ ನಿಧನಹೊಂದಿದ್ದರು.

ರಾಜಕೀಯ ಜೀವನ:

ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿ ಬಡಜನರಿಗೆ ರೈತರಿಗೆ ನ್ಯಾಯ ಕೊಡಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿ, 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದ್ದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1976ರಲ್ಲಿ ಕೆಲವು ಅಧಿಕಾರಿಗಳು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದಡಿ ಬಲವಂತದಿಂದ ಯುವಜನರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದುದನ್ನು ಖಂಡಿಸಿ, ತಾವೇ ಜನರ ಮನವೊಲಿಸಿ ಒಂದೇ ದಿನದಲ್ಲಿ 2500ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಿ ಒಂದೇ ದಿನ ಒಂದೇ ನಗರದಲ್ಲಿ ನಡೆದ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆಯ ದಾಖಲೆ ಸೃಷ್ಟಿಸಿದ್ದರು. ಅಂದು ಬಿಬಿಸಿಯಲ್ಲಿ ಈ ಸುದ್ದಿ ಪ್ರಸಾರವಾಗಿತ್ತು.

ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಭಾಜನರಾಗಿದ್ದರು.

ಶಿಕ್ಷಣತಜ್ಞ:

ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.

ಶಾಲಾ ಕಾಲೇಜು ದಾಖಲೆಗಳ ಪ್ರಕಾರ ಭೀಮಣ್ಣ ಖಂಡ್ರೆ ಅವರ ಜನ್ಮ ದಿನಾಂಕ 1927 ಜನವರಿ ಆದರೂ, ಭೀಮಣ್ಣ ಖಂಡ್ರೆ ಅವರೇ ಹೇಳುತ್ತಿದ್ದಂತೆ ಅವರು ಹುಟ್ಟಿದ್ದು 1923ರ ಜನವರಿ 8ರಂದು. ಮೊನ್ನೆಯಷ್ಟೇ ಅವರು 102 ವರ್ಷ ಪೂರೈಸಿದ್ದರು.

ಸಂತಾಪಗಳ ಮಹಾಪೂರ:

ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಸಚಿವರು, ಶಾಸಕರು, ವಿವಿಧ ಪಕ್ಷಗಳು ಮತ್ತು ಸಂಘಸಂಸ್ಥೆಗಳ ಧುರೀಣರು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ಮಾಜಿ‌ ಸಚಿವ ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.  ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ.

ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

More articles

Latest article