ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಸರಕಾರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದೆ. ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ಘೋಷಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ರೈತರಿಗೆ ಎಂಎಸ್‌ಪಿ ಸಮಸ್ಯೆ ಕುರಿತ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲಾಗುವುದು ಎಂದೂ ಭರವಸೆ ನೀಡಿದ್ದಾರೆ. ಎಂಎಸ್‌ಪಿಗೆ ಕಾನೂನು ಬೆಂಬಲ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರ ಪ್ರತಿಭಟನೆ ದೆಹಲಿ ತಲುಪಿದ ದಿನವೇ ಕೇಂದ್ರ ಸರಕಾರ ಈ ಘೋಷಣೆ ಮಾಡಿದೆ.
ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ನಿಮ್ಮ ಮೂಲಕ ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದರು. ಇದೇ ವೇಳೆ ಪ್ರತಿಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ವಿಪಕ್ಷದವರು ಅಧಿಕಾರದಲ್ಲಿದ್ದಾಗ, ಎಂಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದನ್ನು ನೆನಪಿಸಿದರು.