ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಜಾಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Most read

 ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ ಎಂದು ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್  ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನ ಬಂಗ್ರ ಕೂಳೂರು ಗೋಲ್ಡನ್ ಫಿಂಚ್ ಸಿಟಿಯಲ್ಲಿ ಇಂದು ನಡೆದ ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಹಿಳೆಯರನ್ನು ಎಲ್ಲಿ ಗೌರವಿಸುತ್ತಾರೆ, ಪೂಜಿಸುತ್ತಾರೆ, ಆ ಜಾಗ ಅಭಿವೃದ್ಧಿ ಕಾಣುತ್ತದೆ ಎಂದು ಅಭಿಪ್ರಾಯಪಟ್ಟರು.

ನವೋದಯ ಗ್ರಾಮೀಣ ವಿಕಾಸ ಸಂಸ್ಥೆ ಇವತ್ತು ಹೆಮ್ಮರವಾಗಿ ಬೆಳೆದಿದೆ. 8 ಜಿಲ್ಲೆಗಳಿಗೆ ಕಾರ್ಯಚಟುವಟಿಕೆ ವಿಸ್ತರಣೆ ಮಾಡಿಕೊಂಡು ಈಗ ರಾಜ್ಯ ಮಟ್ಟದ ಸಂಸ್ಥೆಯಾಗಿ ಬೆಳೆಸುತ್ತಿರುವುದು ನಿಜಕ್ಕೂ ಪ್ರಶಂಸಾರ್ಹವಾಗಿದೆ. ರಾಜೇಂದ್ರ ಕುಮಾರ್ ಅವರು ಈ ಎರಡೂ ಕ್ಷೇತ್ರಗಳನ್ನು ಅತ್ಯಂತ ಜಾಣ್ಮೆಯಿಂದ ಸುಮಾರು 3 ದಶಕಗಳಿಂದ ಸ್ವಲ್ಪವೂ ವಿಶ್ವಾಸ ಕಳೆದುಕೊಳ್ಳದೆ ಮುನ್ನಡೆಸುವ ಮೂಲಕ ಸಹಕಾರಿ ಕ್ಷೇತ್ರದ ಭೀಷ್ಮ ಎನಿಸಿಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

ಬ್ಯಾಂಕ್ ವ್ಯವಹಾರಗಳು, ಪಾರದರ್ಶಕವಾಗಿರಬೇಕು. ಬ್ಯಾಂಕ್ ವ್ಯವಹಾರದಲ್ಲೂ ರಾಜೇಂದ್ರ ಕುಮಾರ್ ಅವರು ತೊಡಗಿಸಿಕೊಂಡು, ಇದರ ಜೊತೆಗೆ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ 8 ಜಿಲ್ಲೆಗಳಲ್ಲಿ ನವೋದಯ ಸ್ವ-ಸಹಾಯ ಗುಂಪುಗಳನ್ನು ರಚಿಸುವ ಮೂಲಕ ನೆರವಾಗುತ್ತಿದ್ದಾರೆ ಎಂದು ಹೇಳಿದರು.

ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ. ಇದಕ್ಕಾಗಿಯೇ ಗೃಹಲಕ್ಷ್ಮೀ ಯೋಜನೆಗೆ ವಾರ್ಷಿಕ 28 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಹಾಕಲಾಗುತ್ತಿದೆ. ಮಹಿಳೆ ಸದೃಢವಾಗಿ ಬೆಳೆಯಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೊಟ್, ಸಭಾಧ್ಯಕ್ಷ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ, ಕೆ.ಎನ್.ರಾಜಣ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ್ ಪೂಜಾರಿ, ಕಾರ್ಯಕ್ರಮದ ರೂವಾರಿ ಡಾ.ಎಂ.ಎನ್.ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ನವೋದಯ ಸ್ವ-ಸ್ವಹಾಯ ಗುಂಪುಗಳ ಸದಸ್ಯರು ಹಾಗೂ ಬೃಹತ್ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.

More articles

Latest article