ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಹಾಗೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವಿನ ತಿಕ್ಕಾಟ ತೀವ್ರಗೊಂಡಿದೆ. ಈ ಹಿಂದೆ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿ, ಅವರ ಆಸ್ತಿಯ ವಿವರಗಳನ್ನು ಕೂಡಾ ಬಹಿರಂಗಪಡಿಸಿದ್ದರು. ಮತ್ತು ಕಾಂಗ್ರೆಸ್ ನಾಯಕರ ಜೊತೆಗೆ ಚಂದ್ರಶೇಖರ್ ಸಂಪರ್ಕದಲ್ಲಿದ್ದಾರೆ ಎಂದೂ ಆರೋಪ ಮಾಡಿದ್ದರು.
ಎಡಿಜಿಪಿ ಚಂದ್ರಶೇಖರ್ ಅವರ ದೂರು
ತಮ್ಮ ವಿರುದ್ಧ ಬಹಿರಂಗ ಆರೋಪದ ಬೆನ್ನಲ್ಲೇ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 11 ರಂದು ದೂರು ನೀಡಿದ್ದರು. ದೂರಿನಲ್ಲಿ ನನ್ನ ಮೇಲೆ ಹಾಗೂ ನನ್ನ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧವೂ ಚಂದ್ರಶೇಖರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಎಡಿಜಿಪಿ ಚಂದ್ರಶೇಖರ್ ಅವರು ದೂರಿನಲ್ಲಿ ಹಲವು ಆರೋಪಗಳನ್ನು ಮಾಡಿದ್ದರು ಅದರಲ್ಲೂ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 16/2014 ರಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಎಸ್‌ಐಟಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದೂ ಉಲ್ಲೇಖಿಸಿದ್ದರು.