ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ನಾಲ್ಕು ಅಂತಸ್ತಿನ ಸಿಟಿ ಆಸ್ಪತ್ರೆಯಲ್ಲಿ ಸಂಭವಿಸಿದ ಈ ದುರಂತದಲ್ಲಿ ಗಾಯಗೊಂಡ 30 ಕ್ಕೂ ಹೆಚ್ಚು ಮಂದಿಯನ್ನು ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ. ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇಡೀ ಆಸ್ಪತ್ರೆ ಕಟ್ಟಡಕ್ಕೆ ಆವರಿಸಿದ್ದು ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಸಿಬ್ಬಂದಿ ಹಲವು ಗಂಟೆಗಳ ಕಾಲ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸ್ಟಾಲಿನ್ ಘೋಷಿಸಿದ್ದಾರೆ.