ಮಂಡ್ಯ ಸೆ. 10: ವಸತಿ ಶಾಲೆಯ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ನಿನ್ನೆ ಏಕಾಏಕಿ ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ಏರುಪೇರಾಗಿದೆ. ವಿಷ ಆಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಸದ್ಯ ಚಿಕಿತ್ಸೆ ಪಡೆದಿರುವ ವಿದ್ಯಾರ್ಥಿಗಳು ವಸತಿ ಶಾಲೆಗೆ ಮರಳಿದ್ದಾರೆ.
ವಿಷಯ ತಿಳಿದು ಕೆ.ಆರ್.ಪೇಟೆ ಶಾಸಕ ಎಚ್.ಟಿ. ಮಂಜು ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಿ, ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಘಟನೆಗೆ ನಿಖರ ಕಾರಣ ಏನು ಎಂಬುದು ಅಧಿಕಾರಿಗಳ ಪರಿಶೀಲನೆ ಹಾಗೂ ವರದಿಯಿಂದ ತಿಳಿದುಬರಬೇಕಿದೆ.

