ಬೆಂಗಳೂರು: ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಆಗಮಿಸಿ ಮೋಜಿನ ಜೀವನ ನಡೆಸುವ ಸಲುವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ವೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 77 ಲಕ್ಷ ರೂ. ಮೌಲ್ಯದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಆಫ್ರಿಕಾ ದೇಶದ ಈ ಡ್ರಗ್ ಪೆಡ್ಲರ್ 2017 ರಲ್ಲಿ ವ್ಯಾಪಾರಿ ವೀಸಾದಡಿ ಭಾರತಕ್ಕೆ ಆಗಮಿಸಿದ್ದ. ಈತ ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ದುರುದ್ದೇಶದಿಂದ ಬೆಂಗಳೂರು ನಗರದಲ್ಲಿ ನೆಲೆಸಿರುವ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಮಾದಕವಸ್ತು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಒಂದು ಗ್ರಾಂಗೆ 12 ಸಾವಿರದಿಂದ 15 ಸಾವಿರ ರೂ.ಗಳಂತೆ ಚ್ಚಿನ ಬೆಲೆಗೆ ಐಟಿಬಿಟಿ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಆರ್ ಕಾಲೇಜು ರಸ್ತೆ, ರೈಲ್ವೆ ಗೇಟ್ ಹತ್ತಿರ ವಿದೇಶಿ ಡ್ರಗ್ ಪೆಡ್ಲರ್ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿ ಆತನ ಬಳಿಯಿದ್ದ 77 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್, ತೂಕದ ಯಂತ್ರ ಹಾಗೂ ಮೊಬೈಲ್ ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಈತನ ಮೇಲೆ ಈಗಾಗಲೇ ಉತ್ತರ ಪ್ರದೇಶದಲ್ಲಿಯೂ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.