ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಇತರ ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವಂಚಕನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಘುನಾಥ್ ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿಯು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ಇಂಜಿನಿಯರ್ ವೊಬ್ಬರಿಗೆ ಕರೆ ಮಾಡಿದ್ದ. ವರ್ಗಾವಣೆ ಮಾಡಿಸಿಕೊಡುವುದಾಗಿ ಅವರನ್ನು ನಂಬಿಸಿ 2 ಲಕ್ಷ ರೂಗಳಿಗೆ ಬೇಡಿಕೆ ಇಟ್ಟಿದ್ದ. ಈತನ ಮಾತನ್ನು ನಂಬಿದ್ದ ಇಂಜಿನಿಯರ್ 80 ಸಾವಿರ ರೂ. ಹಣವನ್ನು ಮುಂಗಡವಾಗಿ ನೀಡಿದ್ದರು. ಬಳಿಕ ಈತನ ವಂಚನೆ ಬಗ್ಗೆ ತಿಳಿದು ಬಂದಿತ್ತು. ಇವರು ಸಚಿವರ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರು. ಸಚಿವರ ಆಪ್ತ ಕಾರ್ಯದರ್ಶಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಪ್ತ ಕಾರ್ಯದರ್ಶಿ ನೀಡಿದ ಮಾಹಿತಿಯನ್ನು ಆಧರಿಸಿ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.