ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಲಿವೆ.
ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗಲು ಮತ್ತು ಹಿಂತಿರುಗಲು ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಅದೇ ರೀತಿ ಬಿಎಂಟಿಸಿ ಬಸ್ ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ಹಾಗೂ ಎಸ್‌ಎಸ್‌ಎಲ್ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ ಏ.4 ರವರೆಗೆ ನಡೆಯಲಿವೆ