ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಲಹೆಯಂತೆ ಸಾರಿಗೆ, ಯುವ ಸಬಲೀಕರಣ ಕ್ರೀಡಾ ಸಚಿವ ಮಂಡಿಪಲ್ಲಿ ರಾಮ ಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣಾ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ನೇತೃತ್ವದ ತಂಡ ಭೇಟಿ ನೀಡಿತ್ತು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಅವರು ಯೋಜನೆ ಕುರಿತು ಮಾಹಿತಿ ಒದಗಿಸಿದರು.
ನಂತರ ಪ್ರತಿಕ್ರಿಯೆ ನೀಡಿದ ಆಂಧ್ರಪ್ರದೇಶ ಸಾರಿಗೆ ಸಚಿವ ಮಂಡಿಪಲ್ಲಿ ರಾಮ ಪ್ರಸಾದ್ ರೆಡ್ಡಿ, ಕರ್ನಾಟಕದ ಶಕ್ತಿ ಯೋಜನೆಯು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ಮಹಿಳೆಯರು, ವಿದ್ಯಾರ್ಥಿ ಹಾಗೂ ಕಾರ್ಮಿಕರಿಗೆ ಸಾಕಷ್ಟು ಪ್ರಯೋಜನವಾಗುತ್ತದೆ. ಇದು ಬಡವರ ಪರ ಯೋಜನೆಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿ ಮಾಡಲಾಗುತ್ತದೆ. ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಚಂದ್ರಬಾಬು ನಾಯ್ಡು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. ಇದರಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು.
ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂ. ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ ಎಂದೂ ಅವರು ಹೇಳಿದರು.