ಗೋವಾ ಮಾದರಿ: ಬೀಚ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?

Most read

ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.


ಇಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಚಿಂತನ ಮಂಥನ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಪ್ರವಾಸೋದ್ಯಮಿಯೊಬ್ಬರು ಬೀಚ್ ಗಳಲ್ಲಿ ಮದ್ಯ, ಕಳ್ಳು ವೋಡ್ಕಾ ,ಬಿಯರ್ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೇಂದ್ರ ಅವರು ಪ್ರವಾಸಿಗರನ್ನು ಆಕರ್ಷಿಸುವ ದೃಷ್ಟಿಯಿಂದ ಗೋವಾ ಮಾದರಿಯಲ್ಲಿ ರಾಜ್ಯದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವ ಪ್ರಸ್ತಾವ ಸರ್ಕಾರದ ಮುಂದಿದೆ. ಪ್ರವಾಸೋದ್ಯಮ ನೀತಿ ಅಂತಿಮಗೊಳಿಸುವ ಮುನ್ನ ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ ಎಂದರು.


ರಾಜ್ಯದ ಎಲ್ಲ ಮಹಾನಗರಗಳಲ್ಲಿ ಹೋಟೆಲ್ ಹಾಗೂ ಇತರ ಮಳಿಗೆಗಳು ಮಧ್ಯರಾತ್ರಿ 1ರವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯೂ ಅಡ್ಡಿಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.


ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಬೀಚ್ ಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಚಿಂತನೆ ನಡೆಸಲಾಗಿದೆ. ಪ್ರವಾಸಿಗರು ಬೀಚ್ ಗಳಲ್ಲಿ ಹೆಚ್ಚು ಸಮಯವನ್ನು ಕಳೆಯುವಂತಾಗಬೇಕು. ಹಾಗಾಗಿ ಬೀದಿ ದೀಪಗಳನ್ನು ಅಳವಡಿಸಲು ಸೂಕ್ತ ಸರ್ಕಾರಿ ಮತ್ತು ಖಾಸಗಿ ಸ್ಥಳಗಳನ್ನು ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

More articles

Latest article