ಪಣಜಿ: ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 6 ಮಂದಿ ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೋವಾದ ಶಿರ್ಗಾವ್ ಗ್ರಾಮದ ಶ್ರೀಲೈರೈ ದೇವಿ ದೇವಸ್ಥಾನದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಹಠಾತ್ ಜನಜಂಗುಳಿ ಹೆಚ್ಚಾಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಊಹಿಸಿದ್ದಾರೆ.
ಗೋವಾ ಮಾತ್ರವಲ್ಲದೆ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ್ದ ಸಾವಿರಾರು ಭಕ್ತರು ಉತ್ಸವಕ್ಕಾಗಿ ದೇವಾಲಯದಲ್ಲಿ ನೆರೆದಿದ್ದರು.ಕಾಲ್ತುಳಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆಯ ನಂತರ ದುರಂತಕ್ಕೆ ನಿಖರವಾದ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯೇ ಸ್ಪಷ್ಟಪಡಿಸಿದೆ.
ಗಾಯಗೊಂಡವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಇವರಲ್ಲಿ ಇಬ್ಬರನ್ನು ಬಂಬೋಲಿಮ್ ನಲ್ಲಿರುವ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ಸಣ್ಣಪುಟ್ಟದಾಗಿ ಗಾಯಗೊಂಡಿರುವ 10 ಜನರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಪರಿಸ್ಥಿತಿಯನ್ನು ನಿರ್ವಹಿಸಲು ಆರೋಗ್ಯ ಇಲಾಖೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.