ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ ಹಿಂದುತ್ವ ಸಂಘಟನೆಗಳು ಹಾರ ಹಾಕಿ ಸನ್ಮಾನ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದಿರುವ ಪರಶುರಾಮ್ ಹಾಗೂ ಮನೋಹರ್ ನನ್ನು ಹಿಂದುತ್ವ ಸಂಘಟನೆಗಳಿಂದ ಸ್ವಾಗತಿಸಿ, ಗೌರವಿಸಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಕೆಲವರು ಸನಾತನ ಧರ್ಮಕ್ಕೆ ಜೈ.. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಆರೋಪಿಗಳು ಕಾಳಿಕಾದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಂತರ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಹೂವಿನ ಹಾರಹಾಕಿ ಪೂಜೆ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಂಬಂಧವಿಲ್ಲ ಎಂದು ಹಿಂದುತ್ವ ಸಂಘಟನೆಯ ಸದಸ್ಯರು ವಾದ ಮಾಡಿದ್ದಾರೆ. ಆದರೆ, ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.