ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಒಂಬತ್ತು ತಿಂಗಳು ತುಂಬಿದ ಎಲ್ಲ ಮಕ್ಕಳಿಗೂ ಸುರಕ್ಷತಾ ಹೆಲ್ಮೆಟ್ ಹಾಗೂ ಮಕ್ಕಳ ಸುರಕ್ಷತಾ ಸಾಧನಗಳು ಲಭ್ಯವಾಗುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಂಗಳೂರಿನ ಡಾ.ಕೆ.ಅರ್ಚನಾ ಭಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಬೆಂಗಳೂರಿನ 20 ವರ್ಷದೊಳಗಿನ ಯುವಕರು ಬೈಕ್ ವ್ಹೀಲಿಂಗ್ ಮಾಡುತ್ತಿರುವುದು ಕಂಡುಬರುತ್ತಿದೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳು ಮತ್ತು ಇತರ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಜರುಗಿಸುತ್ತಿಲ್ಲ. ಸರ್ಕಾರ ಏನು ಮಾಡುತ್ತಿದೆ ಎಂದು ನ್ಯಾಯಪೀಠ ಪ್ರಶ್ನಿಸಿತು.
ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುವುದರಿಂದ ಅಪಘಾತಗಳು ಉಂಟಾಗಿ ಅಪಾರ ಸಾವು ನೋವು ಸಂಭವಿಸುತ್ತಿವೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಾರೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಕಾನೂನು ರೂಪಿಸಬೇಕು. ಬೈಕ್ ವ್ಹೀಲಿಂಗ್ ಅನ್ನು ನಿಯಂತ್ರಿಸಲೇಬೇಕು. ಈ ಸಂಬಂಧ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮೌಖಿಕವಾಗಿ ಆದೇಶ ನೀಡಿತು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ನಿಯಮಗಳ ಜಾರಿಗೆ ಹಾಗೂ ಬೈಕ್ ಸವಾರರ ರಸ್ತೆ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಮುಂದಿನ ವಿಚಾರಣೆ ವೇಳೆಗೆ ಮಾಹಿತಿ ನೀಡಿ ಎಂದು ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪಕ್ಕದ ಶೀಲಂಕಾದಲ್ಲಿ ಮಕ್ಕಳ ಹೆಲ್ಮೆಟ್‌ಗಳು ಅಗತ್ಯ ಪ್ರಮಾಣದಲ್ಲಿ ಲಭ್ಯವಾಗುತ್ತಿವೆ. ಅದೇ ಪ್ರಕಾರ ನಮ್ಮಲ್ಲೂ ಮಕ್ಕಳ ಹೆಲ್ಮೆಟ್‌ಗಳು ಲಭ್ಯವಾಗಬೇಕಿದೆ ಎಂಬ ಅಂಶವನ್ನು ಗಮನಕ್ಕೆ ತಂದರು. ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ ಹೆಲ್ಮೆಟ್ ಉತ್ಪಾದಕರೊಂದಿಗೆ ರಾಜ್ಯ ಸರ್ಕಾರ ಸಭೆ ನಡೆಸಿದೆ. ಮಕ್ಕಳ ಹೆಲ್ಮೆಟ್ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.