RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರವುಗೊಳಿಸಿದೆ.
ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, RSS ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 58 ವರ್ಷಗಳ ಹಿಂದೆ ನೀಡಲಾದ ಸಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಹೇಳಿಕೊಂಡಿದ್ದಾರೆ.
30/11/1966ರಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಉದ್ಯೋಗಗಳಲ್ಲಿ ಇರುವವರ ಮೇಲಿನ ನಿಬಂಧನೆಗಳನ್ನು ಪರಾಮರ್ಶೆಗೆ ಒಳಪಡಿಸಲಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರೆಸ್ಸೆಸ್) ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
1966ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದು ಮತ್ತು ಅದರ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಅಂದಿನ ಸರ್ಕಾರ ನಿಷೇಧಿಸಿತ್ತು.
ಈ ಕುರಿತು ಸಂಸದ ಜಯರಾಮ್ ರಮೇಶ್ ಟ್ವೀಟ್ ಮಾಡಿದ್ದು, ಸಿಬ್ಬಂದಿ, ಸಾರ್ವಜನಿಕ ಅಹವಾಲು ಮತ್ತು ಪಿಂಚಣಿ ಸಚಿವಾಲಯದಲ್ಲಿನ ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು (ಡಿಒಪಿಟಿ) ಜುಲೈ 9ರಂದು ಹೊರಡಿಸಿರುವ ಆದೇಶದಲ್ಲಿ, 1966, 1970 ಮತ್ತು 1980 ರಲ್ಲಿ ಆಗಿನ ಸರ್ಕಾರಗಳು ಹೊರಡಿಸಿದ ಆದೇಶಗಳನ್ನು ಕೇಂದ್ರ ಸರ್ಕಾರವು ತಿದ್ದುಪಡಿ ಮಾಡಿದೆ, ಇದರಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಶಾಖೆಗಳು ಮತ್ತು ಅದರ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.
ಮುಂದುವರೆದು, ಸರ್ದಾರ್ ಪಟೇಲ್ ಅವರು ಫೆಬ್ರವರಿ 1948 ರಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‍ಎಸ್‍ನ್ನು ನಿಷೇಧಿಸಿದ್ದರು. ತರುವಾಯ, ಉತ್ತಮ ನಡವಳಿಕೆಯ ಭರವಸೆಯ ಮೇಲೆ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು.