ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರೀಡಾಕೂಟವು ಇದೇ ತಿಂಗಳ ಮೇ ೧೮ರಿಂದ ೧೯ರವರೆಗೆ ನಡೆಯಲಿದೆ. ಈ ಕ್ರೀಡಾಕೂಟಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಸತಿ ಕಲ್ಪಿಸಲು ಶಾಲಾ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಕಾಯ್ದಿರಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ವಿವಿಧ ಜಿಲ್ಲೆಗಳ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಸ್ಟೆಲ್ ಗಳಲ್ಲಿ ಉಳಿದುಕೊಂಡಿದ್ದಾರೆ. ಪರೀಕ್ಷಾ ಸಮಯದಲ್ಲಿ ಅವರು ಎಲ್ಲಿ ವಾಸ್ತವ್ಯ ಹೂಡಬೇಕು? ಅವರನ್ನು ಯಾರು ಉಳಸಿಕೊಳ್ಳುತ್ತಾರೆ? ಪರೀಕ್ಷೆ ಬರೆಯದೇ ವಿದ್ಯಾರ್ಥಿಗಳ ಭವಿಷ್ಯ ಹಾಳಾದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.
ಪರೀಕ್ಷೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ವಸತಿ ನಿಲಯಗಳನ್ನು ತೊರೆದರೆ ನಾವು ಎಲ್ಲಿ ಉಳಿದುಕೊಳ್ಳಬೇಕು? ಎಂದು ವಿದ್ಯಾರ್ಥಿಗಳು ಜಿಲ್ಲಾಡಳಿತದ ವಿರುದ್ಧ ಕಿಡಿ ಕಾರಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ಮೇ16 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.