ಬೆಂಗಳೂರು: ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ನಾಳೆಯಿಂದ ಆರಂಭವಾಗುತ್ತಿದ್ದು, ನಗರದಾದ್ಯಂತ ಭದ್ರತೆ ಕೈಗೊಳ್ಳುವ ಬಗ್ಗೆ ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಇಂದು ಅಧಿಕಾರಿಗಳ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಸಭೆಯಲ್ಲಿ ನಗರದ ಎಲ್ಲಾ ವಿಭಾಗಗಳ ಎಸಿಪಿಗಳು, ಡಿಸಿಪಿಗಳು, ಜಂಟಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು ಉಪಸ್ಥಿತರಿದ್ದರು.
ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನೆ ಸಂದರ್ಭಗಳಲ್ಲಿ ಅನುಸರಿಸಬೇಕಾದ ಭದ್ರತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.
ಯಾವುದೇ ಕಾರಣಕ್ಕೂ ಸಣ್ಣಪುಟ್ಟ ಘರ್ಷಣೆಗಳೂ ನಡೆಯಬಾರದು. ಒಂದು ಸಣ್ಣ ಅವಘಡ ನಡೆದರೂ ಕೂಡಲೇ ಇನ್ ಸ್ಪೆಪೆಕ್ಟರ್ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಬಗೆಹರಿಸಬೇಕು. ಗಣೇಶನನ್ನು ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಅಗ್ತ ಪೊಲೀಸರನ್ನು ನಿಯೋಜಿಸಿ, ಆಯೋಜಕರೊಂದಿಗೆ ಸಂಪರ್ಕ ಸಾಧಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿ ಅಗ್ನಿ ಶಾಮಕ ವಾಹನಗಳೊಂದಿಗೆ ಸಿಬ್ಬಂದಿಗಳನ್ನು ಕೆಲವು ಪ್ರದೇಶಗಳಲ್ಲಿ ಕಾಯ್ದಿರಿಸಿಕೊಳ್ಳಬೇಕು ಎಂದು ಸೂಚಿಸಿದರು.
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿಯೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಯಾವುದೇ ರೀತಿಯ ಗಲಭೆಗಳಿಗೆ ಅವಕಾಶ ಮಾಡಿಕೊಡಬಾರದು. ಸಣ್ಣ ಘಟನೆ ಸಂಭವಿಸಿದರೂ ಆರಂಭದಲ್ಲೇ ಬಗೆಹರಿಸಿ ಇತ್ಯರ್ಥಗೊಳಿಸಬೇಕು ಎಂದು ಸಲಹೆ ನೀಡಿದರು.