ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ: ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Most read

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಇಂದು ನಡೆಯಿತು. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಜಿಬಿಎ ಅಧ್ಯಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ಹ್ಯಾರಿಸ್. ರಿಜ್ವಾನ್, ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್. ಮೇಲ್ಮನೆ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರು. ಆದರೆ ಬಿಜೆಪಿ ಸದಸ್ಯರು ಗೈರುಹಾಜರಾಗಿದ್ದರು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, GBA ರಚನೆ ಮತ್ತು ಅದರ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದು, ಸಮರ್ಪಕ ಕಸ ವಿಲೇವಾರಿ, ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ, ಚರಂಡಿ ವ್ಯವಸ್ಥೆ ಚೆನ್ನಾಗಿರುವಂತೆ ಮಾಡಬೇಕು. ಬೆಂಗಳೂರು ನಗರವನ್ನು ಚೊಕ್ಕಟವಾಗಿ ಇಡಲು, ನಗರದ ಸೌಂದರ್ಯ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು:

* ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್‌ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು.

* ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್‌ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ನೀಡಿತ್ತು. ಆದರೆ ನಂತರ ಬಂದ ಸರ್ಕಾರಗಳಲ್ಲಿ ಈ ಕುರಿತು ಯಾವುದೆ ತೀರ್ಮಾನ ಆಗಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನಾರಚಿಸಿದೆವು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ನಾವು ಕಾನೂನು ತಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಿದ್ದೇವೆ. ಇದೀಗ ಐದು ನಗರಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮೇ 15 ರಂದು ಜಾರಿಗೆ ಬಂದಿದೆ. ಜನರಿಗೆ ಪೂರಕವಾದ, ಅವರ ಆಶೋತ್ತರಗಳನ್ನು ಈಡೇರಿಸುವ ಆಡಳಿತ ನೀಡುವ ಉದ್ದೇಶದಿಂದ ಪ್ರಜಾಪ್ರಭುತ್ವದ ಆಶಯಕ್ಕೆ ಅನುಗುಣವಾಗಿ ಬಿಜಿಎ ರಚಿಸಿದ್ದೇವೆ. ಅಧಿಕಾರದ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗಲಿದೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಿನ ದಿನಗಳಲ್ಲಿ ಬೆಂಗಳೂರಿನ ನಾಗರಿಕರಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸುವುದು, ಸಮರ್ಪಕ ಕಸ ವಿಲೇವಾರಿ, ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ, ಚರಂಡಿ ವ್ಯವಸ್ಥೆ ಚೆನ್ನಾಗಿರುವಂತೆ ಮಾಡಬೇಕು. ಬೆಂಗಳೂರು ನಗರವನ್ನು ಚೊಕ್ಕಟವಾಗಿ ಇಡಲು, ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಎಲ್ಲಾ ಐದು ನಗರ ಪಾಲಿಕೆಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ.

* ಈ ಎಲ್ಲಾ ಕಾರ್ಯಕ್ಕೆ ಸರ್ಕಾರದ ಜೊತೆಗೆ ಸಮನ್ವಯ ಅಗತ್ಯ. ಮುಂದಿನ ದಿನಗಳಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳು, ಬೆಂಗಳೂರು ನಾಗರಿಕರಿಗೆ ಸೇವೆ ಒದಗಿಸುತ್ತಿರುವ ಬಿಡಿಎ, ಬಿಡಬ್ಲುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಆರ್‌ಸಿಎಲ್‌ನಂತಹ ಸಂಸ್ಥೆಗಳು ಜಿಬಿಎ ಜತೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

* ಐದು ನಗರಪಾಲಿಕೆಗಳಿಗೆ ಸಮರ್ಪಕವಾದ ಆಡಳಿತ ಕಚೇರಿಗಳನ್ನು ನಿರ್ಮಿಸಲು ಸ್ಥಳವನ್ನು ಗುರುತಿಸಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚನೆ ನೀಡಿದ್ದೇವೆ. ಆಯಾ ಕಾರ್ಪೊರೇಶನ್‌ಗಳು ತಮ್ಮ ಹಂತದಲ್ಲಿಯೇ ಕಸ ವಿಲೇವಾರಿ ಸಮರ್ಪಕವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು.

* ಎಲ್ಲಾ ನಗರಸಭೆ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಕಸ ವಿಲೇವಾರಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಫುಟ್‌ಪಾತ್‌ಗಳು ಸಾಧ್ಯವಾದಷ್ಟು ವಿಸ್ತಾರವಾಗಿರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ. ಇದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದೇವೆ.

* ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮೆಟ್ರೊ ಲೈನ್‌ನಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿಯನ್ನು ಹೆಚ್ಚಿಸುವ ಕುರಿತು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಸಣ್ಣ ಬಸ್ಸುಗಳನ್ನು ನಿಯೋಜಿಸುವ ಬಗ್ಗೆ ಪರಿಶೀಲಿಸಲು ಸಾರಿಗೆ ಸಚಿವರಿಗೆ ಸೂಚನೆ.

* ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಜನರಿಗೆ ಅತ್ಯುತ್ತಮ ನಾಗರಿಕ ಸೌಲಭ್ಯ, ಉತ್ತಮ ಆಡಳಿತ ನೀಡಬೇಕೆಂಬ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

* ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಇಲ್ಲಿ ಅವಕಾಶವಿದೆ. ಆದರೆ ಕೆಲವು ಜನಪ್ರತಿನಿಧಿಗಳು ಈ ಅವಕಾಶ ಕಳೆದುಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ವಿರೋಧವಿರುವವರು, ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧವಿರುವವರು ಈ ಸಭೆಯನ್ನು ಬಹಿಷ್ಕರಿಸಿದ್ದಾರೆ.

More articles

Latest article