ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ (ED) ದಾಳಿ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಿಗೂಢವಾಗಿ ನಾಪತ್ತೆಯಾಗಿರುವ ಸುದ್ದಿ ರಾಜ್ಯ ಆಡಳಿತ ವಲಯದಲ್ಲಿ ಕುತೂಹಲ ಮೂಡಿಸಿದೆ. ವರದಿಗಳ ಪ್ರಕಾರ, ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬೆಳವಣಿಗೆಯ ನಡುವೆ, ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ವ್ಯವಸ್ಥೆಯಲ್ಲಿನ ವಿವಾದಗಳೊಂದಿಗೆ ಹೆಸರು ತಳುಕು ಹಾಕಿಕೊಂಡಿದ್ದ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಯಾರು ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.
ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು 2016ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ. ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದು, ಭಾರತೀಯ ತಂತ್ರಜ್ಞಾನ ಸಂಸ್ಥೆ ಕಾನ್ಪುರ (IIT Kanpur) ಹಿನ್ನೆಲೆಯುಳ್ಳವರು ಎಂದು ಲಭ್ಯವಿರುವ ಅಧಿಕಾರಿಗಳ ವಿವರಗಳು ತಿಳಿಸುತ್ತವೆ.
ಗಂಗ್ವಾರ್ ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ಬಳಿಕ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರ ಹುದ್ದೆ ಅವರಿಗೆ ದೊಡ್ಡ ಮಟ್ಟದ ಸಾರ್ವಜನಿಕ ಪರಿಚಯ ತಂದುಕೊಟ್ಟಿತು. 2025ರ ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಗಂಗ್ವಾರ್ ಅವರು ಜಂಟಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿದ್ದುಕೊಂಡೇ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರ ಹುದ್ದೆಯ ಸಮವರ್ತಿ ಪ್ರಭಾರ ಮುಂದುವರಿಸಿದ್ದರು ಎಂಬುದು ದಾಖಲಾಗಿದೆ.
ಆದರೆ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಅವರು ಹಲವು ವಿವಾದಗಳ ಕೇಂದ್ರಬಿಂದುವಾದರು. ವಿಶೇಷವಾಗಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಕನ್ನಡ ಅನುವಾದಕ್ಕೆ ಸಂಬಂಧಿಸಿದ ದೋಷಗಳು ಅಭ್ಯರ್ಥಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಅರ್ಥವನ್ನೇ ಬದಲಿಸುವ ರೀತಿಯ ಅನುವಾದದ ಸಮಸ್ಯೆಗಳಿವೆ ಎಂದು ಅಭ್ಯರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳು ಆರೋಪಿಸಿದ್ದವು. ಈ ಹಿನ್ನೆಲೆಯಲ್ಲಿ ಗಂಗ್ವಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಈ ವಿವಾದದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಗಂಗ್ವಾರ್ ಅವರಿಂದ ಮಾಡಲಾಗಿದೆ ಎನ್ನಲಾದ ಟ್ವೀಟ್ ಕೂಡ ಭಾರೀ ಚರ್ಚೆಗೆ ಕಾರಣವಾಗಿತ್ತು. ಕನ್ನಡ ಮಾಧ್ಯಮ ಅಭ್ಯರ್ಥಿಗಳು ಪರೀಕ್ಷೆಯಲ್ಲಿನ ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡ ಸಂದರ್ಭದಲ್ಲಿ, ಅವರ ನೋವನ್ನು “ಎಂಜಾಯ್ ಮಾಡುತ್ತೇನೆ” ಎಂಬ ಅರ್ಥ ಬರುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಈ ಹೇಳಿಕೆ ಚಳವಳಿ ನಿರತ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶಕ್ಕೆ ಕಾರಣವಾಗಿತ್ತು.
ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಸಂಘಟನೆಗಳು ಗಂಗ್ವಾರ್ ಅವರನ್ನು ಪರೀಕ್ಷಾ ನಿಯಂತ್ರಕ ಹುದ್ದೆಯಿಂದ ತೆಗೆದುಹಾಕಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. 2025ರ ಜನವರಿಯಲ್ಲಿ ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಗಂಗ್ವಾರ್ ಹಾಗೂ ಕೆಪಿಎಸ್ಸಿ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಿತ್ತು.
ಕೆಪಿಎಸ್ಸಿ ಪರೀಕ್ಷೆಗಳಲ್ಲಿನ ಅಕ್ರಮ ಮತ್ತು ಲೋಪಗಳ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತ್ತು. ಗಂಗ್ವಾರ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಬಿಜೆಪಿ ಶಾಸಕರು ಆಗ್ರಹಿಸಿದ್ದರು. ಪರೀಕ್ಷಾ ನಿಯಂತ್ರಕರ ಹುದ್ದೆಯಲ್ಲಿ ಅವರು ಮುಂದುವರಿದಿರುವುದರ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. 2025ರ ಮಾರ್ಚ್ನಲ್ಲಿ ಕರವೇ ಅಹೋರಾತ್ರಿ ಧರಣಿಯನ್ನೂ ನಡೆಸಿತು. ಆ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಇನ್ನೂ ಕೆಪಿಎಸ್ಸಿಯ ಪರೀಕ್ಷಾ ನಿಯಂತ್ರಕರಾಗಿ ಮುಂದುವರಿದಿರುವುದೇ ಸರ್ಕಾರದ ಮೇಲೆ ಅನುಮಾನ ಮೂಡಿಸುತ್ತಿದೆ ಎಂದು ಆರೋಪಿಸಿದ್ದರು.
ಅಂತಿಮವಾಗಿ 2026ರ ಮಾರ್ಚ್ನಲ್ಲಿ ರಾಜ್ಯ ಸರ್ಕಾರ ಗಂಗ್ವಾರ್ ಅವರನ್ನು ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರ ಹುದ್ದೆಯಿಂದ ಬಿಡುಗಡೆ ಮಾಡಿತು. ಅವರ ಬದಲಿಗೆ ದಿಗ್ವಿಜಯ್ ಬೋಡ್ಕೆ ಅವರನ್ನು ಹೊಸ ಪರೀಕ್ಷಾ ನಿಯಂತ್ರಕರನ್ನಾಗಿ ನೇಮಿಸಲಾಯಿತು. ಕೆಪಿಎಸ್ಸಿ ಪರೀಕ್ಷೆಗಳ ಕುರಿತು ಕೇಳಿಬಂದಿದ್ದ ನಿರಂತರ ವಿವಾದಗಳ ನಡುವೆಯೇ ಈ ಬದಲಾವಣೆ ನಡೆದಿತ್ತು.
ಇದಾದ ಬಳಿಕ ಜೂನ್ 2026ರ ಐಎಎಸ್ ವರ್ಗಾವಣೆ ಸಂದರ್ಭದಲ್ಲಿ ಗಂಗ್ವಾರ್ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು.
ಹೀಗಾಗಿ ಇದೀಗ ಕೆಪಿಎಸ್ಸಿ ನೇಮಕಾತಿ ಅಕ್ರಮದ ತನಿಖೆಯ ನಡುವೆಯೇ ಅವರ ನಾಪತ್ತೆ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಅವರ ನಾಪತ್ತೆಗೂ ಜಾರಿ ನಿರ್ದೇಶನಾಲಯದ ದಾಳಿಗೂ ಅಥವಾ ಕೆಪಿಎಸ್ಸಿ ಅಕ್ರಮಕ್ಕೂ ನೇರ ಸಂಬಂಧವಿದೆ ಎಂಬುದು ತನಿಖೆಯಿಂದ ದೃಢಪಟ್ಟಿಲ್ಲ.

