ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ಹಲವು ಕಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಲ್ಲಿ ಪ್ರತಿಭಟನೆ:-
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜವನ್ನು ವಿಷಯವಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಗೆ ಅವಕಾಶ ನೀಡದೇ ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ಪಡೆದು ಪ್ರತಿಭಟನೆ ನಡೆಸುವಂತೆ ಪೊಲೀಸರು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ ಅವರಿಗೆ ಪ್ರತಿಭಟನೆಗೆ ಉದ್ದೇಶಿಸಿರುವ ಸ್ಥಳದಲ್ಲೇ ನೋಟೀಸ್ ನೀಡಿ ಸ್ಥಳದಿಂದ ನಿರ್ಗಮಿಸುವಂತೆ ಸೂಚಿಸಿದರು.
ಇದಕ್ಕೆ ಒಪ್ಪದ ಬಿಜೆಪಿ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಬೇರೆ ಪ್ರತಿಭಟನೆ ನಡೆಯುತ್ತಿದೆ, ಜಾಗ ಇಲ್ಲ ಎಂದರು. ಪೊಲೀಸ್ ನೋಟಿಸ್ ಮಧ್ಯೆಯೂ ಮೈಸೂರು ಬ್ಯಾಂಕ್ ವೃತ್ತದಲ್ಲೇ ಪ್ರತಿಭಟನೆಗೆ ಮುಂದಾದರು. ಈ ವೇಳೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ:-
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮಾನ್ ಧ್ವಜವನ್ನು ಕಾಂಗ್ರೆಸ್ ಕೆಳಗಿಳಿಸಿ ಹರಿದುಹಾಕುವ ಮೂಲಕ ಅವಮಾನ ಮಾಡಿದೆ ಎಂದು ಆರೋಪಿಸಿ ಹುಬ್ಬಳ್ಳಿಯ ಹುಧಾ ಮಹಾನಗರ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಿನಿವಿಧಾನ ಸೌಧದಲ್ಲಿ ಸಮಾವೇಶಗೊಂಡ ಅವರು, ಕಾಂಗ್ರೆಸ್ ಸರ್ಕಾರದ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದ್ದಾರೆ.
ಬಾಗಲಕೋಟೆಯಲ್ಲಿ ಪ್ರತಿಭಟನೆ:-
ಬಿಜೆಪಿ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತಮಾಡಿದ ಅವರು ಶಾಸಕ ಸುದ್ದು ಮತ್ತವರ ಬೆಂಬಲಿಗರು ಧ್ವಜ ಪ್ರಕರಣಕ್ಕೆ ತೀರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತುಷೀಕರಣ ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರಂತೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಂಬ ಮಾರ್ಗದಲ್ಲಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.