ತುಮಕೂರು: ರಾಜ್ಯಾದ್ಯಂತ ದುಡಿಯುತ್ತಿರುವ ಸುಮಾರು 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕಾರ್ಮಿಕರಿಗೋಸ್ಕರ ಜಾರಿಗೆ ತಂದಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಅಡಿಯಲ್ಲಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 25 ಲಕ್ಷ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದೆ. ಜೊಮ್ಯಾಟೊ, ಸ್ವಿಗ್ಗಿ, ಪ್ಲಿಪ್‌ಕಾರ್ಟ್ ಸಂಸ್ಥೆಗಳ ಡೆಲಿವರಿ ಕಾರ್ಮಿಕರಿಗೆ ರೂ. 2 ಲಕ್ಷ ಅಪಘಾತ ಪರಿಹಾರ ಹಾಗೂ ಜೀವವಿಮೆ ಸೇರಿದಂತೆ ರೂ.4 ಲಕ್ಷ ವಿಮೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ವಿವರಿಸಿದರು.
ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್ ಗಳಿಗೆ ನೆರವಾಗಲಿದೆ. ರಾಜ್ಯಾದ್ಯಂತ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಕಾರ್ಮಿಕರು ಸೇರಿದಂತೆ 40 ಲಕ್ಷ ಕಾರ್ಮಿಕರಿದ್ದಾರೆ. ಅವರಿಗೂ ಸಾಮಾಜಿಕ ಭದ್ರತೆ, ಕಲ್ಯಾಣ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೋಂದಣಿ ಪೋರ್ಟಲ್ ಆರಂಭಿಸಲಾಗಿದೆ ಎಂದು ಸಚಿವ ಲಾಡ್ ಹೇಳಿದರು.
ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವ ರ್ ಮಾತನಾಡಿ, ಕಾರ್ಮಿಕ ಸಂಘಟನೆಗಳು ಏಕತೆಯನ್ನು ಹೊಂದಿದ್ದರೆ ಸರ್ಕಾರದ ಸವಲತ್ತು ಹಾಗೂ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಆದ್ದರಿಂದ ಕಾರ್ಮಿಕ ಸಂಘಟನೆಗಳು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಸಮಾರಂಭದಲ್ಲಿ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಮಿಕ ಆಯಕ ಎಚ್.ಎನ್.ಗೋಪಾಲಕ ಷ, ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ, ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಮೊದಲಾದವರು ಉಪಸ್ಥಿತರಿದ್ದರು.