ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೇ 20ರವರೆಗೆ ಭರ್ಜರಿ ಮಳೆಯಾಗಲಿದ್ದು ಇಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಮುಂಬರುವ ನಾಲ್ಕು ದಿನಗಳಲ್ಲಿ ಉಚ್ಛ್ರಾಯ ಸ್ಥಿತಿಯನ್ನು ತಲುಪಲಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಬಿರುಗಾಳಿ, ಮಿಂಚು, ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಂಭವವಿದೆ.
ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಪ್ರಸ್ತುತ ಕೇರಳ ತೀರದಿಂದ ಮರಾಠವಾಡದ ಕಡೆಗೆ ಚಲಿಸುತ್ತಿದ್ದು, ಇದರ ಪರಿಣಾಮ ಮುಂದಿನ ಒಂದು ವಾರದವರೆಗೆ ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ವ್ಯಾಪಕವಾಗಿ ಗುಡುಗು, ಸಿಡಿಲು ಮತ್ತು ಬಿರುಗಾಳಿ (40-50 kmph) ಸಹಿತ, ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.