ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ತಗ್ಗಿದ್ದರೂ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ವರದಿ ಪ್ರಕಟಿಸಿರುವ ಹವಾಮಾನ ಇಲಾಖೆ, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 1, 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಅ.31 , ನಾಳೆ ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ನವೆಂಬರ್ 1 ಮತ್ತು 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಬೀದರ್, ಬೆಳಗಾವಿ, ಹಾವೇರಿ, ಧಾರವಾಡ, ಕಲಬುರ್ಗಿ, ಯಾದಗಿರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯಾಗುವ ಸಂದರ್ಭದಲ್ಲಿ ಬೆಳಗ್ಗೆ ಮತ್ತು ಸಂಜೆ ಚಳಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.