ರಾಜಾದ್ಯಂತ ಇಂದೂ ಜೋರು ಮಳೆ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ರೆಡ್‌ ಅಲರ್ಟ್‌, ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Most read

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ಮಳೆ ತಂಪೆರದಿತ್ತು. ಇಂದಿನಿಂದ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಒಂದು ವಾರ ಮುಂಚಿತವಾಗಿ ಪ್ರವೇಶಿಸಿದೆ. ಈಗಾಗಲೇ ಮಳೆ ಆರಂಭವಾಗಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಅವಾಂತರವನ್ನೂ ಸೃಷ್ಟಿಸಿದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆ ಜೋರಾದ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.ಇಂದೂ ಸಹ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವೂ ಹೆಚ್ಚಾಗಲಿದೆ. ಮೇ 31ರವರೆಗೆ ಜೋರಾಗಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ವಿಜಯಪುರದಲ್ಲಿ ಮಳೆ ಜೋರಾಗಿ ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡದಲ್ಲೂ ಮಳೆ ಬೀಳುವ ಸಾಧ್ಯತೆ ಇದೆ. ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿ ಜಿಲ್ಲೆಗಳಲ್ಲೂ ಜೋರಾಗಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಲಿದ್ದು, ಈ ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇಂದೂ ಕೂಡ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

More articles

Latest article