ಬೆಂಗಳೂರು: ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಬೀಳುತ್ತಿದ್ದ ಮಳೆ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಈ ತಿಂಗಳ ಕೊನೆಯ ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ. ಆದರೆ, ಈಗಾಗಲೇ ಮುಂಗಾರು ಮಳೆಯ ವಾತಾವರಣ ಕಂಡುಬರುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. 15ರಿಂದ 20 ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿದೆ.
ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ ಬೀಸುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ವಾತಾವರಣದಲ್ಲಾಗಿರುವ ಈ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಇದರಿಂದ ಗರಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಮೇ 22ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, , ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.