ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
ಇದರೊಂದಿಗೆ ಕೆಲವು ದಿನಗಳಿಂದ ಉದ್ಭವಿಸಿದ್ದ ಗೊಂದಲ ನಿವಾರಣೆಯಾದಂತಾಗಿದ್ದು, ಈ ನಾಲ್ಕೂ ತರಗತಿಗಳಿಗೆ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಬೋರ್ಡ್ ಪರೀಕ್ಷೆ ನಡೆಯಲಿದೆ.
ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಹೈಕೋರ್ಟ್ ಪೀಠ ರದ್ದುಪಡಿಸಿದ್ದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಹಸಿರು ನಿಶಾನೆ ನೀಡಿದೆ. ಈಗಾಗಲೇ ನಡೆದಿರುವ ಪರೀಕ್ಷೆಗಳನ್ನು ಮುಂದುವರೆಸುವಂತೆ ಅದು ಸೂಚಿಸಿದೆ.
ಮುಂದಿನ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮುನ್ನ ಸಂಬಂಧಪಟ್ಟವರೊಂದಿಗೆ ಚರ್ಚಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.