2022ರ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Most read

ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಹೈಕೋರ್ಟ್ ರದ್ದುಪಡಿಸಿದೆ.

ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಪ್ರಭಾವಿ ಸಂಸ್ಥೆಗಳಿಗೆ ಸೇರಿದ ವ್ಯಕ್ತಿಗಳು ಆರೋಪಿಗಳಾಗಿದ್ದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಅಕ್ಟೋಬರ್ 2024 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ವಾದ ಪ್ರತಿವಾದ ಆಲಿಸಿದ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀವು ಸಚಿವ ಸಂಪುಟದ ತೀರ್ಮಾನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ವೊಂದರ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯ ಮೇಲೆ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದ 2022 ರ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ಈ 43 ಪ್ರಕರಣಗಳಲ್ಲಿ ಕೆಲವು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967, ಸಾರ್ವಜನಿಕ ಆಸ್ತಿ ನಾಶ ತಡೆ ಕಾಯ್ದೆ, 1984 ಮತ್ತು ಧಾರ್ಮಿಕ ಸಂಸ್ಥೆ (ದುರುಪಯೋಗ ತಡೆ) ಕಾಯ್ದೆ, 1988ರ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪ್ರಾಸಿಕ್ಯೂಟರ್ ಗೆ ನಿರ್ದೇಶನ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇಲ್ಲ ಎಂದು ಅರ್ಜಿದಾರರ ಪರವಾಗಿ ವಾದಿಸಲಾಗಿತ್ತು. ಅಲ್ಲದೆ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಯೋಗ್ಯವಲ್ಲ ಎಂದು ಹೇಳಿದ್ದ ಪೊಲೀಸ್ ಮತ್ತು ಪ್ರಾಸಿಕ್ಯೂಷನ್ ಇಲಾಖೆಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಸಚಿವ ಸಂಪುಟದ ನಿರ್ಧಾರವನ್ನು ಅರ್ಜಿದಾರರು ಉಲ್ಲೇಖ ಮಾಡಿದ್ದರು.

2020 ರಲ್ಲಿ ರಾಜ್ಯ ಸರ್ಕಾರವು ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಂಡ ಸಂದರ್ಭದಲ್ಲಿ, 2022 ರಲ್ಲಿ ಹೈಕೋರ್ಟ್, ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸುಪ್ರೀಂ ಕೋರ್ಟ್ನ ತೀರ್ಪಿನಿಂದ ನಿಯಂತ್ರಿಸಲ್ಪಡುತ್ತದೆ ಎಂದು ಸ್ಪಷ್ಟಪಡಿಸಿತ್ತು ಎಂದು ಅರ್ಜಿದಾರರು ನ್ಯಾಯಾಲಯದ ಗಮನಸೆಳೆದಿದ್ದರು. ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಆಯಾ ಹೈಕೋರ್ಟ್ಗ ಳ ಅನುಮತಿಯಿಲ್ಲದೆ ಹಿಂಪಡೆಯಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು.

More articles

Latest article