ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಇಂದು ತಡೆ ನೀಡಿದೆ.
ಮಾನನಷ್ಟ ಮೊಕದ್ದಮೆಯ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ ಮತ್ತು ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ತಮಗೆ ನೀಡಿದ್ದ ಸಮನ್ಸ್ ಗೆ ಪ್ರತಿಯಾಗಿ 2024ರ ಜೂನ್ 7ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಖುದ್ದು ಹಾಜರಾಗಿದ್ದರು ಮತ್ತು ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.
ವಿಧಾನಸಭೆ ಚುನಾವಣೆಗೆ ಮುನ್ನ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಪಕ್ಷಕ್ಕೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು. ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೊದಲ ಆರೋಪಿಯನ್ನಾಗಿ ಮತ್ತು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯನ್ನು ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳನ್ನಾಗಿ ಮಾಡಲಾಗಿತ್ತು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ವರ್ಷ ಜೂನ್ 1 ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬಳಿಕ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು.