ಬೆಂಗಳೂರು: ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಭಾಷಣ ಓದದೆ ವಿಧಾನಸೌಧದಿಂದ ನಿರ್ಗಮಿಸಿದ್ದಾರೆ.
ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ರಾಜ್ಯಪಾಲರಿಂದ ಸಂವಿಧಾನದ ಉಲ್ಲಂಘನೆಯಾಗಿದೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡಲಾಗಿದೆ. ಪಕ್ಷ ಮತ್ತು ಸರ್ಕಾರದ ವತಿಯಿಂದ ಅವರ ವರ್ತನೆಯನ್ನು ಪ್ರತಿಭಟಿಸುತ್ತೇವೆ ಎಂದು ಹೇಳಿದ್ದಾರೆ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದ ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ಬೇರೆ ಭಾಷಣ ಓದಿಸಲಾಗಿದೆ. ರಾಜ್ಯಪಾಲರು ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರಣಗಳೇನು?
ಮಹಾತ್ಮಾ ಗಾಂಧಿ ನರೇಗಾ ಯೋಜನೆ ಹೆಸರನ್ನು ವಿಬಿಜಿ ರಾಮ್ ಜಿ ಎಂದು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕರೆದಿತ್ತು. ಸಂಪ್ರದಾಯದಂತೆ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಸರ್ಕಾರ ರಚಿಸಿದ ಭಾಷಣ ಓದಬೇಕು. ಆದರೆ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಈ ಮೊದಲು ವಿಧಾನಸಭೆಗೆ ಬರುವುದೇ ಎಂಬ ಅನುಮಾನ ಉಂಟಾಗಿತ್ತು.
ಆದರೂ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ರಾಜ್ಯಪಾಲರ ನಡೆಯನ್ನು ಖಂಡಿಸಿ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕೋಲಾಹಲ ಉಂಟಾಯಿತು.

