ರಾಜಕಾರಣಿಗಳ ವಿರುದ್ಧದ ಪ್ರಕರಣಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ತಾರತಮ್ಯ ಮಾಡುತ್ತಿದ್ದಾರೆಂಬ ವಿಷಯ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುದ್ದು ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದೆ.
ಈ ಕುರಿತು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. ಆದರೆ ಮುಡಾ ಪ್ರಕರಣದಲ್ಲಿ ಯಾವುದೇ ತನಿಖಾ ವರದಿ ಇಲ್ಲದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇಲ್ಲಿ, ಎಚ್.ಡಿ. ಕುಮಾರಸ್ವಾಮಿ, ಮುರುಗೇಶ ನಿರಾಣಿ ವಿರುದ್ಧದ ಪ್ರಕರಣಗಳು ಸೇರಿದಂತೆ ಆರು ಪ್ರಕರಣಗಳಲ್ಲಿ ತನಿಖೆಯಾಗಿದೆ, ಆದರೂ ವಿಚಾರಣೆಗೆ ಅನುಮತಿ ನೀಡಿಲ್ಲ. ರಾಜ್ಯಪಾಲರ ಈ ನಡೆ ತಾರತಮ್ಯದಿಂದ ಕೂಡಿದ್ದು, ಈ ವಿಷಯದ ಕುರಿತು ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ.
ಸಿದ್ದರಾಮಯ್ಯ ಪ್ರಕರಣದಲ್ಲಿ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದರು. ಈ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದರು. ಆದರೆ ಈ ನಾಲ್ಕು ಪ್ರಕರಣದಲ್ಲಿ ತನಿಖೆ ಆಗಿದೆ ಹಾಗೂ ಎರಡು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದರೂ ಏನೂ ಕ್ರಮ ಆಗಿಲ್ಲ. ಹೀಗಿರುವಾಗ ಕ್ಯಾಬಿನೆಟ್ ಈ ಸಲಹೆ ಕೊಡುವುದು ಸೂಕ್ತ ಎಂದು ಹೇಳಿದ್ದಾರೆ.
ರಾಜ್ಯಪಾಲರು ಅನುಮತಿ ನೀಡಲು ಬಾಕಿ ಇರುವ ಪ್ರಕರಣಗಳ ಮಾಹಿತಿ ತರಿಸಿಕೊಂಡು ಚರ್ಚಿಸಲು ತೀರ್ಮಾನಿಸಲಾಗಿದೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮೇಲೆ ಪ್ರಕರಣ ದಾಖಲಿಸಲು ಲೋಕಾಯುಕ್ತ ಕೇಳಿದ್ದ ಅನುಮತಿಯನ್ನು ರಾಜ್ಯಪಾಲರು ಈಗಾಗಲೇ ತಿರಸ್ಕರಿಸಿದ್ದಾರೆ. ಉಳಿದ ಕೆಲವು ಪ್ರಕರಣಗಳಲ್ಲಿ ರಾಜ್ಯಪಾಲರು ಕೇಳಿದ್ದ ಸ್ಪಷ್ಟಿಕರಣವನ್ನು ನೀಡಲಾಗಿದೆ. ಆದರೂ ಅನುಮತಿ ನೀಡದೆ ರಾಜ್ಯಪಾಲರು ತಮ್ಮ ಬಳಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.