ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ಸಂಜೆ 5.45 ರ ಸುಮಾರಿಗೆ ಎರಡು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಒಟ್ಟು ಎಂಟು ಮಂದಿ ಇದ್ದರು ಎಂದು ತಿಳಿದು ಬಂದಿದೆ.
ನೆಲ ಮಹಡಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿರುವ ರೆಫ್ರಿಜರೇಟರ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಿಖರವಾದ ಕಾರಣವನ್ನು ಪರಿಶೀಲಿಸಲಾಗುತ್ತಿದೆ. ಅವಘಡದಲ್ಲಿ ಮೂರು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಐದು ಮಂದಿಯನ್ನು ರಕ್ಷಿಸಿದ್ದಾರೆ. ಅವರಲ್ಲಿ ಇಬ್ಬರು ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.