Sunday, September 8, 2024

ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ: ಸಿದ್ಧರಾಮಯ್ಯ

Most read

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನುಡಿದಿದ್ದಾರೆ.

ವಿಧಾನಸೌಧದಲ್ಲಿಂದು ಮಹತ್ವದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು, ಆದರೆ ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಆರೋಪಿಸಿದರು.

ಬಿಜೆಪಿ, ಜೆಡಿಎಸ್ ನವರು ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ನುಡಿದರು‌.

ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ಆದರೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಇದನ್ನೆಲ್ಲಾ ನೋಡಿದಾಗ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.‌ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾಧ್ಯವಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಗಿಂತ ಶೇ.13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದು ಅವರು ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಜೀರ್ ಅಹ್ಮದ್, ಯು.ಬಿ. ವೆಂಕಟೇಶ್ ಉಪಸ್ಥಿತರಿದ್ದರು.

More articles

Latest article