ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಇಂದು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಉದ್ದೇಶಿತ ಮಸೂದೆಯಲ್ಲಿ 30 ದಿನಗಳ ಅವಧಿಗೆ ಬಂಧನದಲ್ಲಿದ್ದರೆ 31ನೇ ದಿನ ಅವರನ್ನು ಪದಚ್ಯುತಗೊಳಿಸಲು ಅವಕಾಶ ಇರುತ್ತದೆ. ಆದರೆ, ಬಂಧನದಿಂದ ಬಿಡುಗಡೆ ಆದವರು ಪ್ರಧಾನಿ, ಮುಖ್ಯಮಂತ್ರಿ ಅಥವಾ ಸಚಿವರಾಗಿ ನೇಮಕಗೊಳ್ಳಲು ಯಾವುದೇ ನಿರ್ಬಂಧ ಇರುವುದಿಲ್ಲ.
ಈ ಮಸೂದೆಗಳನ್ನುಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಮಂಡಿಸಲಿದ್ದು ನಂತರ ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಲಾಗುತ್ತದೆ.
ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಿದ್ದರೆ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕಾನೂನು ಚೌಕಟ್ಟು ವಿಧಿಸಲು ಈ ಮಸೂದೆಗಳನ್ನು ರೂಪಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಪ್ರಧಾನಿಯು 30 ದಿನಗಳ ಕಾಲ ಬಂಧನದಲ್ಲಿದ್ದರೆ 31ನೇ ದಿನ ಅವರು ರಾಜೀನಾಮೆ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಅವರು ರಾಜೀನಾಮೆ ನೀಡದೇ ಇದ್ದರೂ ಅವರು ಪದಚ್ಯುತರಾಗುತ್ತಾರೆ. 30 ದಿನಗಳ ಅವಧಿಗೆ ಬಂಧನದಲ್ಲಿದ್ದರೆ ಅಥವಾ 5 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಯು 31ನೇ ದಿನದಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಬಹುದಾಗಿದೆ. ಒಂದು ವೇಳೆ ಶಿಫಾರಸು ಮಾಡದಿದ್ದರೂ ಅವರು ಸ್ವಾಭಾವಿಕವಾಗಿ 31ನೇ ದಿನದಂದು ಅಧಿಕಾರ ಕಳೆದುಕೊಳ್ಳಲಿದ್ದಾರೆ.
ರಾಜ್ಯಗಳ ಮುಖ್ಯಮಂತ್ರಿ ಮತ್ತು ಸಚಿವರಿಗೂ ಇದೇ ಮದರಿ ಅನ್ವಯವಾಗಲಿದೆ. ರಾಜ್ಯಗಳಲ್ಲಿ ಪದಚ್ಯುತಗೊಳಿಸುವ ಅಧಿಕಾರ ರಾಜ್ಯಪಾಲರು ಹೊಂದಿರುತ್ತಾರೆ.
ದೆಹಲಿ ಮುಖ್ಯಮಂತ್ರಿಯಾಗಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಬಂಧನದಲ್ಲಿದ್ದರೂ ಅಧಿಕಾರದಲ್ಲಿ ಮುಂದುವರೆದಿದ್ದರು. ಅಂಥಹ ಪ್ರಕರಣಗಳಲ್ಲಿ ಪದಚ್ಯುತಗೊಳಿಸುವುದಕ್ಕಾಗಿಯೇ ಈ ತಿದ್ದುಪಡಿ ಪ್ರಸ್ತಾವಗಳನ್ನು ಮಂಡಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.