ಎಚ್ಚೆತ್ತುಕೊಳ್ಳದಿದ್ದರೆ ದಕ್ಷಿಣ ಭಾರತದ ಭಾಷೆಗಳು ನಶಿಸಲಿವೆ; ಡಾ.ಪುರುಷೋತ್ತಮ ಬಿಳಿಮಲೆ

Most read

ಮಂಜೇಶ್ವರ: ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

            ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು ಗೋವಾ ರಾಜ್ಯದ 149 ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಭಿನ್ನ ಭಾಷಿಕರ ನಡುವೆ ವೈಮನಸ್ಯವನ್ನು ಮೂಡಿಸುವ ಕೆಲಸವನ್ನು ತಮ್ಮ ಉಳಿವಿಗಾಗಿ ರಾಜಕಾರಣಿಗಳು ಮುಂದುವರೆಸುತ್ತಲೇ ಇದ್ದು, ಇದು ಭಾಷೆಗಳ ಕಟ್ಟುವಿಕೆಗೆ ಮಾರಕವಾಗಿದೆ.  ದಕ್ಷಿಣ ಭಾರತೀಯ ರಾಜ್ಯಗಳ ಭಾಷೆಗಳು ಹಾಗೂ ಹಿಂದಿ ಭಾಷೆಯ ಬೆಳವಣಿಗೆಯ ಇಂದಿನ ಗತಿಯನ್ನು ತುಲನೆ ಮಾಡಿದ್ದಲ್ಲಿ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ದಕ್ಷಿಣ ಭಾರತದ ಭಾಷೆಗಳು ಅವನತಿಯ ಕಡೆ ಮುಖ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

            ಸಂವಿಧಾನವು ಭಾಷಿಕವಾಗಿ ದೇಶದ ಜನಕ್ಕೆ ಹಲವಾರು ಹಕ್ಕುಗಳನ್ನು ಕೊಟ್ಟಿದೆ. ರಾಜ್ಯ ಸರ್ಕಾರಗಳು ಗಡಿಭಾಗಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರುಗಳ ಹಿತ ಕಾಯಲು ಪ್ರತ್ಯೇಕ ಭಾಷಾ ನಿರ್ದೇಶಕರನ್ನು ನೇಮಿಸಬೇಕಿದ್ದು, ಹಲವು ರಾಜ್ಯಗಳು ಈ ಕುರಿತಂತೆ ಉತ್ಸುಕವಾಗಿಲ್ಲ. ಸರ್ಕಾರಗಳು ತಮ್ಮ ನಾಡಿನ ಅಲ್ಪಸಂಖ್ಯಾತ ಭಾಷೆಗಳ ಕುರಿತಂತೆ ಗೌರವ ಹೊಂದಬೇಕಾದ್ದು ಪ್ರಾಥಮಿಕ ಜವಾಬ್ದಾರಿಯಾಗಿದ್ದು, ಕರ್ನಾಟಕದ ಎಲ್ಲ ನೆರೆ ರಾಜ್ಯಗಳ ಸರ್ಕಾರಗಳಿಗೆ ಸಂವಿಧಾನದತ್ತ ಅಧಿಕಾರದಂತೆ ಭಾಷಾ ನಿರ್ದೇಶಕರನ್ನು ನೇಮಿಸಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗ್ರಹಿಸಲಿದೆ ಎಂದು ಡಾ.ಬಿಳಿಮಲೆ ತಿಳಿಸಿದರು.

            ಒಂದು ಲಕ್ಷ ಎಂಬತ್ತು ಸಾವಿರ ಕೋಟಿ ರೂ.ಗಳ ಆಯವ್ಯಯ ಗಾತ್ರ ಹೊಂದಿರುವ ಕೇರಳ ರಾಜ್ಯ ಅಲ್ಲಿನ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಿಸದೆ ಇರುವುದು ಅಕ್ಷಮ್ಯವೆಂದ ಡಾ. ಪುರುಷೋತ್ತಮ ಬಿಳಿಮಲೆ, ಇದು ನಾಚಿಕೆಗೇಡಿನ ಸಂಗತಿಯಾಗಿದ್ದು, ಅಲ್ಪಸಂಖ್ಯಾತ ಕನ್ನಡಿಗರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದರು. 

ನಾವು ಮಲೆಯಾಳಿಗರಲ್ಲ, ಕೇರಳದ ಕನ್ನಡಿಗರು- ಮಂಜೇಶ್ವರದ ಶಾಸಕ ಎ.ಕೆ.ಎಂ.ಆಶ್ರಫ್

ದಕ್ಷಿಣ ಕನ್ನಡ ಜಿಲ್ಲೆಯ ಭಾಗವಾಗಿದ್ದ ಕಾಸರಗೋಡು ಪ್ರದೇಶ 1956ರಲ್ಲಿ ಭಾಷಾವಾರು ಪ್ರಾಂತ್ಯಗಳ ರಚನೆಯ ಸಂದರ್ಭದಲ್ಲಿ ದುರದೃಷ್ಟವಶಾತ್ ಕೇರಳದ ಭಾಗವಾಯಿತು. ಆದರೆ ಅಲ್ಲಿನ ಕನ್ನಡಿಗರು  ಕನ್ನಡ ಭಾಷೆಯನ್ನು ಮರೆಯದೆ ತಲೆತಲಾಂತರಗಳಿಂದ ಅದನ್ನು ಪೋಷಿಸಿಕೊಂಡು ಬರುತ್ತಿರುವುದು ಅವರ ಕನ್ನಡ ಪ್ರೇಮವನ್ನು ಅಭಿವ್ಯಕ್ತಿಸುತ್ತದೆ. ನಾವು ಮಲೆಯಾಳಿಗಳೆಂದು ಗುರುತಿಸಿಕೊಳ್ಳುವುದಕ್ಕಿಂತ ಕೇರಳದ ಕನ್ನಡಿಗರೆಂದು ಗುರುತಿಸಿಕೊಳ್ಳಲು ನಮಗೆ ಹೆಮ್ಮೆ ಇದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಜೇಶ್ವರದ ಶಾಸಕರಾದ ಎ.ಕೆ.ಎಂ.ಆಶ್ರಫ್ ಹೇಳಿದರು.

ಕರ್ನಾಟಕ ಸರ್ಕಾರದ ಈ ರೀತಿಯ ಸ್ಪಂದನಾಶೀಲ ಕಾರ್ಯಕ್ರಮಗಳು ಗಡಿನಾಡಿನ ಕನ್ನಡಿಗರಲ್ಲಿ ಹೊಸ ವಿಶ್ವಾಸವನ್ನು ಮೂಡಿಸುತ್ತವೆ ಎಂದ ಎ.ಕೆ.ಎಂ.ಆಶ್ರಫ್, ಪ್ರಾಧಿಕಾರದ ಈ ಪ್ರಯತ್ನ ಶ್ಲಾಘನೀಯ ಎಂದರು.

More articles

Latest article