ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ ಸ್ಥಳಕ್ಕೆ ರಾಜ್ಯ ಅಂತರಿಕ ಭದ್ರತಾ ವಿಭಾಗದ ಐಜಿಪಿ ಡಿ.ರೂಪ ಅವರು ಭೇಟಿ ನೀಡಿದ್ದಾರೆ.
ಹತನಾದ ವಿಕ್ರಂ ಗೌಡನ ವಿರುದ್ಧ ಕೊಲೆ ಪ್ರಕರಣವೂ ಸೇರಿದಂತೆ 61 ಪ್ರಕರಣಗಳು ದಾಖಲಾಗಿದ್ದವು ಎಂದು ಸ್ಥಳಕ್ಕೆ ಭೇಟಿ ಕೊಟ್ಟ ಡಿಜಿಪಿ ಡಿ.ರೂಪ ತಿಳಿಸಿದರು.
ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಭೇಟಿ ಕೊಟ್ಟ ಡಿಜಿಪಿ, ಈತನ ವಿರುದ್ಧ ಕೇರಳದಲ್ಲೂ 19 ಪ್ರಕರಣಗಳು ದಾಖಲಾಗಿದ್ದು, ಕಳೆದ 15 ದಿನಗಳಿಂದಲೂ ಶೋಧ ಕಾರ್ಯಾಚರಣಿ ನಡೆಯುತ್ತಿತ್ತು ಎಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ಕೊಟ್ಟರು.
ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ಪೊಲೀಸರ ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.