ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ನಮ್ಮ ಸರ್ಕಾರ ವರದಿಯನ್ನು ಸ್ವೀಕಾರ ಮಾಡಿದ್ದು, ಸಚಿವ ಸಂಪುಟ ಸಭೆಗೆ ವರದಿಯನ್ನು ತರಲಾಗುವುದು. ಸಂಪುಟದಲ್ಲಿ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು. ವರದಿ ಅನುಷ್ಠಾನದಿಂದ ಜಾತಿಗಳ ಸ್ಥಿತಿಗತಿ ಆಧರಿಸಿ ಶಿಕ್ಷಣ, ಉದ್ಯೋಗ ಸೇರಿ ನಾನಾ ವಲಯಗಳಲ್ಲಿ ಅವಕಾಶ ಮತ್ತು ಸೌಲಭ್ಯ ಸಿಗಲಿದೆ. ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹೇಳಿದರು.
ಹಿಂದುಳಿದ ಸಮಾಜದ ಬಗ್ಗೆ ವಿಶೇಷ ಕಾಳಜಿ: ಹಿಂದುಳಿದ ಸಮುದಾಯಗಳ ಬಗ್ಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಕಾಳಜಿಯನ್ನು ಹೊಂದಿದ್ದವರಾಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳು ದೇವಾಂಗ ಸಮುದಾಯಕ್ಕೆ ಉಮಾಶ್ರೀ ಅವರನ್ನು ಸಚಿವರನ್ನಾಗಿ ಮಾಡಿದ್ದರು. ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಮುಖ್ಯಮಂತ್ರಿ ಯಾರದರೂ ಇದ್ದರೆ ಅದು ಸಿದ್ದರಾಮಯ್ಯ ಅವರು ಮಾತ್ರ. ಮುಂದೆಯೂ ಈ ಸಮಾಜಕ್ಕೆ ರಾಜಕೀಯ ಅವಕಾಶ ಕಲ್ಪಿಸಲಿದ್ದಾರೆ ಎಂದರು.
ಇನ್ನು ದೇವರದಾಸಿಮಯ್ಯ ಅವರ ಹಾದಿಯಾಗಿ ದಾರ್ಶನಿಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ವಚನಕಾರರ ಆದರ್ಶಗಳನ್ನು ಪಾಲಿಸಿದರೆ ಅದು ನಾವು ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.
12ನೇ ಶತಮಾನದಲ್ಲಿ ದೇವರದಾಸಿಮಯ್ಯ ಅವರು ಕ್ರಾಂತಿಕಾರಕವಾದಂತಹ ಹೆಜ್ಜೆಯನ್ನಿಟ್ಟ ಮಹನೀಯರು. ಜಾತಿ ಪದ್ಧತಿ, ಲಿಂಗ ಅಸಮಾನತೆ ಬಗ್ಗೆ ಧ್ವನಿ ಎತ್ತಿದ್ದರು. ಅಂದೇ ಬಡತನದ ಬಗ್ಗೆ ವಿವೇಚನ ಹೊಂದಿದ್ದ ದಾಸಿಮಯ್ಯ ಅವರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದರು ಎಂದು ಸಚಿವರು ಶ್ಲಾಘಿಸಿದರು.
ಬಸವಣ್ಣ, ದೇವರ ದಾಸಿಮಯ್ಯ, ಕನಕದಾಸರು, ಪುರಂದರ ದಾಸರು ಹಾದಿಯಾಗಿ ಎಲ್ಲ ಶರಣರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದವರು. ಇಂದು ಮಹನೀಯರೆಲ್ಲರನ್ನು ಒಂದೊಂದು ಸಮಾಜಕ್ಕೆ ಸಿಮೀತಗೊಳಿಸುತ್ತಿರುವುದು ವಿಷಾದನೀಯ ಎಂದರು.
ಕಾರ್ಯಕ್ರಮದಲ್ಲಿ ದಯಾನಂದಪುರಿ ಸ್ವಾಮೀಜಿ, ವಿಧಾನಪರಿಷತ್ ಸದಸ್ಯೆ ಉಮಾಶ್ರೀ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್, ಮಾಜಿ ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ಮಾಜಿ ಮೇಯರ್ ಎಸ್.ಹರೀಶ್, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.