ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.
ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮವನ್ನೂ ಬೀರುವುದಿಲ್ಲ ಎಂದರು.