ಮಂಡ್ಯ: ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ಬಳಿಕ ಕೃಷ್ಣ ಅವರ ಮೊಮ್ಮಗ, ಡಿ.ಕೆ. ಶಿವಕುಮಾರ್ ಅವರ ಅಳಿಯ ಅಮರ್ತ್ಯ ಹೆಗ್ಡೆ ತಮ್ಮ ತಾತ ಎಸ್.ಎಂ.ಕೃಷ್ಣ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್.ಎಂ. ಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾದರು. ಅಗ್ನಿಸ್ಪರ್ಶಕ್ಕೂ ಮುನ್ನ ಎಸ್ಎಂ ಕೃಷ್ಣ ಅವರ ಚಿತೆಗೆ ಪತ್ನಿ ಪ್ರೇಮಾ, ಪುತ್ರಿಯರು, ಸಂಬಂಧಿಕರು ಗಂಧದ ತುಂಡುಗಳನ್ನು ಇಟ್ಟು ಅಂತಿಮ ವಿದಾಯ ಹೇಳಿದರು. ಬಳಿಕ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೃತರ ಗೌರವಾರ್ಥವಾಗಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು. ಚಿತೆಗೆ 1 ಟನ್ ಶ್ರೀಗಂಧದ ಕಟ್ಟಿಗೆ ಮತ್ತು ಇತರೆ ಕಟ್ಟಿಗೆಗಳು ಹಾಗೂ 50 ಕೆಜಿ ತುಪ್ಪದಿಂದ ಅಭಿಷೇಕ ಮಾಡಲಾಯಿತು.
ಇದಕ್ಕೂ ಮೊದಲು ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ಡಾ.ಜಿ. ಪರಮೇಶ್ವರ್, ಚೆಲುವರಾಯಸ್ವಾಮಿ, ಡಿ.ಸುಧಾಕರ್, ಡಾ.ಮಹದೇವಪ್ಪ, ಎಚ್.ಕೆ. ಪಾಟೀಲ್ ಸೇರಿದಂತೆ ಅನೇಕ ಸಚಿವರು ಭಾಗಿಯಾಗಿದ್ದರು. ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಶಾಸಕರು, ಸಚಿವರು ಸೇರಿದಂತೆ ಹಲವು ರಾಜಕಾರಣಿಗಳು, ಮಠಾಧೀಶರು, ಸ್ವಾಮೀಜಿಗಳು ಸರ್ಕಾರಿ ಉನ್ನತ ಅಧಿಕಾರಿಗಳು ಎಸ್ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸಿ ಅಗಲಿದ ನಾಯಕ ಕೃಷ್ಣ ಅವರಿಗೆ ವಿದಾಯ ಹೇಳಿದರು. ಮಂಡ್ಯ ಜಿಲ್ಲೆಯ ಎಲ್ಲ ಶಾಸಕರೂ ಹಾಜರಿದ್ದರು.
ಸ್ಥಳದಲ್ಲಿ ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 700ಕ್ಕೂ ಹೆಚ್ಚು ಸಿಬ್ಬಂದಿ, ಕೆಎಸ್ಆರ್ಪಿ, ಡಿಎಆರ್ ತುಕಡಿ ಸೇರಿ 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.
ನಿನ್ನೆ ನಿಧನ ಹೊಂದಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ ಸೋಮನಹಳ್ಳಿಗೆ ತೆರೆದ ವಾಹನದಲ್ಲಿ ಕೊಂಡೊಯ್ಯಲಾಯಿತು. ದಾರಿಯುದ್ದಕ್ಕೂ ಸಾವಿರಾರು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು. ಸ್ಕೈ ವಾಕರ್ ಗಳ ಮೇಲಿಂದ ಹೂವಿನ ಮಳೆಗೆರೆದು ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು.ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು.