ಭಾರತದ ಜತೆ ಸಂಬಂಧ ಸರಿಪಡಿಸಿಕೊಳ್ಳಲು ಪಾಕ್‌ಗೆ ವಿಶ್ವಸಂಸ್ಥೆ ತಾಕೀತು

Most read

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಪರಾಮರ್ಶೆ  ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ.

ಈ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಕಠಿಣ ಪ್ರಶ್ನೆಗಳನ್ನು ಮುಂದಿಟ್ಟಾಗ ಪಾಕಿಸ್ತಾನ ನಿರುತ್ತರವಾಯಿತು ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ದಾಳಿಯ ವೇಳೆ ಪ್ರವಾಸಿಗರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ಹತ್ಯೆ ಮಾಡಿರುವ ಕುರಿತೂ ಭದ್ರತಾ ಮಂಡಳಿಯ ಕೆಲವು ಸದಸ್ಯರು ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ.

ಪರಿಸ್ಥಿತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ದೇಶದ ಪರ ಗಮನ ಸೆಳೆಯಲು ಪಾಕಿಸ್ತಾನ ಮಾಡಿದ ಪ್ರಯತ್ನಗಳು ವಿಫಲವಾಗಿವೆ. ಭಾರತದೊಂದಿಗೆ ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಸೂಚಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.

ಭದ್ರತಾ ಮಂಡಳಿಯ 15 ಕಾಯಂ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿರುವ ಪಾಕಿಸ್ತಾನ, ಪರಿಸ್ಥಿತಿಯನ್ನು ಕುರಿತು ರಹಸ್ಯ ಚರ್ಚೆ ನಡೆಸುವಂತೆ ಕೋರಿಕೊಂಡಿತ್ತು. ಎರಡೂ ರಾಷ್ಟ್ರಗಳು ಪರಮಾಣು ಶಸ್ತ್ರಸಜ್ಜಿತವಾಗಿದ್ದು, ಉಭಯ ದೇಶಗಳ ನಡುವಿನ ಕಲಹ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಇತ್ತೀಚೆಗೆ ಕಳವಳ ವ್ಯಕ್ತಪಡಿಸಿದ್ದರು.

More articles

Latest article