ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷರ ಈ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇದುವರೆಗೂ ಸ್ಪಷ್ಟನೆ ನೀಡಿಲ್ಲ. ಯಾವಾಗ ಮಾತನಾಡುತ್ತೀರಿ ಮೋದಿಯವರೇ ಎಂದು ಇಂದು ಮತ್ತೆ ಕಾಂಗ್ರೆಸ್ ಪ್ರಶ್ನಿಸಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮೋದಿ ಅವರನ್ನು ಪ್ರಶ್ನಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ‘2025ರ ಮೇ 10ರಿಂದ 2025ರ ಜೂನ್ 13ರ ನಡುವಿನ 34 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು, 3 ದೇಶಗಳಲ್ಲಿ 13 ವಿಭಿನ್ನ ಸಂದರ್ಭಗಳಲ್ಲಿ ಮಾತನಾಡುತ್ತಾ, ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ. ಈ ಬಗ್ಗೆ ನೀವು (ಮೋದಿ) ಯಾವಾಗ ಪ್ರತಿಕ್ರಿಯೆ ನೀಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರು ವಿವಿಧ ಸಂದರ್ಭಗಳಲ್ಲಿ ನೀಡಿದ ಹೇಳಿಕೆಗಳ ವಿಡಿಯೊ ಕ್ಲಿಪ್‌ಗಳ ಪಟ್ಟಿ ಹಾಗೂ ಮಾಧ್ಯಮ ವರದಿಗಳ ಲಿಂಕ್ ಸಹಿತ ರಮೇಶ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ಮತ್ತು ಭಾರತದ ನಡುವಿನ ಸಂಘರ್ಷವನ್ನು ನಾನು ವ್ಯಾಪಾರದ ಮೂಲಕ ಇತ್ಯರ್ಥಪಡಿಸಿದ್ದೇನೆ ಎಂದು ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಆ ಬಗ್ಗೆ ಚಕಾರ ಎತ್ತದೆ ಮೌನವಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ, ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿತ್ತು.
ಈ ದಾಳಿಗೆ ಪಾಕಿಸ್ತಾನವೂ ಪ್ರತಿದಾಳಿ ನಡೆಸಿದ್ದು, ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಎರಡೂ ದೇಶಗಳು ಕದನ ಯುದ್ಧ ವಿರಾಮಕ್ಕೆ ಒಪ್ಪಿಕೊಂಡಿದ್ದವು.