ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹಲವು ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು, ನಾಳೆ ಭಿನ್ನಮತೀಯ ನಾಯಕರ ಸಭೆ ನಡೆಯಲಿದೆ.
ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು ಹೊಡೆದಿರುವ ಯತ್ನಾಳ್, ರಮೇಶ್ ಜಾರಕಿಹೊಳಿ ಈಗಾಗಲೇ ಹಲವು ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರು ಇಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರೊಂದಿಗೆ ಒಂದು ಸುತ್ತಿನ ರಹಸ್ಯ ಮಾತುಕತೆ ನಡೆಸಿರುವ ಕುರಿತು ವರದಿಯಾಗಿದೆ.
ಮುಡಾ ಹಗರಣ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ನಡೆಯಬೇಕಿರುವ ಪಾದಯಾತ್ರೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಈ ನಾಯಕರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಒಳಒಪ್ಪಂದ ಮಾಡಿಕೊಂಡು ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಡಿಕೆಶಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟುವುದು ವಿಜಯೇಂದ್ರ ಅವರ ಹುನ್ನಾರ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಈಗಾಗಲೇ ಬಹಿರಂಗವಾಗಿಯೇ ಆರೋಪಿಸಿದ್ದಾರೆ.
ಒಂದು ವೇಳೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆದರೆ, ಪ್ರತ್ಯೇಕವಾಗಿ ಪಾದಯಾತ್ರೆ ನಡೆಸುವ ಬಗ್ಗೆಯೂ ಈ ನಾಯಕರು ಚಿಂತಿಸುತ್ತಿದ್ದಾರೆ.
ನಾಳೆ ಸಂಜೆ ಅಥವಾ ನಾಡಿದ್ದು ಬಿಜೆಪಿ ಭಿನ್ನಮತೀಯರ ಸಭೆ ಬೆಂಗಳೂರು ನಗರದ ಹೊರವಲಯದಲ್ಲಿ ನಡೆಯುವ ಸಾಧ್ಯತೆ ಇದ್ದು, ಯತ್ನಾಳ್, ರಮೇಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಸಮಾನಮನಸ್ಕರು ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ನಿರ್ಧಾರಗಳನ್ನು ಅಧಿಕೃತವಾಗಿಯೇ ಪ್ರಕಟಿಸುವ ಸಾಧ್ಯತೆ ಇದೆ.
ಭಿನ್ನಮತೀಯರ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಹದಿನೈದಕ್ಕೂ ಹೆಚ್ಚು ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆ ಇದ್ದು, ಸಭೆ ಬಳಿಕ ಈ ತಂಡ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ.