ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶೆಟ್ಟರ್, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಬಿಜೆಪಿ ಸೇರ್ಪಡೆಯಾಗಿದ್ದಕ್ಕೆ ಸಂತೋಷವಾಗುತ್ತಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರಿದ್ದೆ. 8-9 ತಿಂಗಳ ಕಾಲ ನನ್ನನ್ನು ಬಿಜೆಪಿಗೆ ಕರೆತರಲು ಬಿಜೆಪಿ ನಾಯಕರು ಬಹಳಷ್ಟು ಪ್ರಯತ್ನ ಮಾಡಿದ್ದರು’ ಎಂದು ಹೇಳಿದರು.
‘ಇಂದು ಅಮಿತ್ ಶಾ ಅವರನ್ನು ಕೂಡ ಭೇಟಿ ಮಾಡಿದೆ. ಅವರು ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಇದೀಗ ನಡ್ಡಾ ಅವರನ್ನು ಕೂಡ ಭೇಟಿ ಮಾಡುತ್ತೇವೆ’ ಎಂದು ಸಂತೋಷ ವ್ಯಕ್ತಪಡಿಸಿದರು.
‘ನಾನು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆಯನ್ನು ಇ-ಮೇಲ್ ಮೂಲಕ ಕಳುಹಿಸಿದ್ದೇನೆ ಹಾಗೂ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೂ ಸಹ ರಾಜೀನಾಮೆ ನೀಡಿದ್ದೇನೆ. ಕೆಲವು ದಿನಗಳಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವೆ. ಎಂದು ಹೇಳಿದರು.
ನರೇಂದ್ರ ಮೋದಿ ಮೊತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ಇನ್ನೂ ಮುಂದೆ ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ ಎಂದರು.