ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯನ್ನು ತೆಲಂಗಾಂಣ ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ.
ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ಮೇ 6ರಿಂದ ಅನರ್ಹ ಆದೇಶವು ಜಾರಿಗೆ ಬರಲಿದ್ದು, ಆರು ವರ್ಷಗಳವರೆಗೆ ಮುಂದುವರಿಯಲಿದೆ. ಹೀಗಾಗಿ ರಾಜ್ಯ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದರು.
ಕರ್ನಾಟಕ ಆಂಧ್ರಪ್ರದೇಶ ಅಂತರರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಲಯವು ರೆಡ್ಡಿ ಮತ್ತು ಇತರ ಮೂವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ರೂ.10 ಸಾವಿರ ದಂಡ ವಿಧಿಸಿದೆ. ರೆಡ್ಡಿ ಅವರು ಎರಡನೇ ಅಪರಾಧಿಯಾಗಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿಯಲಿದೆ. ಮುಂದಿನ ಆದೇಶವನ್ನು ಪರಿಗಣಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.