ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ 10 ವರ್ಷಗಳ ಬಳಿಕ ವಿಧಾನಸಭೆ ಚುನಾವಣೆ ನಡೆದು 49 ಸ್ಥಾನಗಳನ್ನು ಪಡೆಯುವ ಮೂಲಕ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಜಯಭೇರಿ ಭಾರಿಸಿದ ಬೆನ್ನಲ್ಲೇ 6 ವರ್ಷಗಳ ಬಳಿಕ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂತೆಗೆದುಕೊಳ್ಳಲು ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದೆ. ಇದರ ನಂತರ, ರಾಷ್ಟ್ರಪತಿ ಮುರ್ಮು ಅಗತ್ಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. “ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಿರುವ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾದ, ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ 31 ನೇ ಅಕ್ಟೋಬರ್, 2019 ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ನೇಮಕದ ಮೊದಲು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಗೆಜೆಟ್‌ನಲ್ಲಿ ತಿಳಿಸಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ್ದಾರೆ.
ಸದ್ಯ ಸರ್ಕಾರದ ರಚನೆಗೆ ಸಿದ್ಧತೆಗಳು ನಡೆಯುತ್ತಿದ್ದು, ನೂತನ ಸಿಎಂ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅಕ್ಟೋಬರ್ 16ದಂದು ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದೆ.